

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯಾದ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಗುರುತಿಸಲಾಗಿದ್ದು, ಅಭಿವೃದ್ಧಿ ಪಡಿಸಲು ಸರ್ಕಾರ ತೀರ್ಮಾನಿಸಿದೆ ಎಂದುಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್‌ನಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಕರ ಬಡ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ಜತೆ ಚರ್ಚಿಸಲಾಗಿದೆ. ಶೀಘ್ರದಲ್ಲೇ ಸಿಹಿಸುದ್ದಿ ಬರಲಿದೆ ಎಂದು ಭರವಸೆ ನೀಡಿದರು.
ಜಿಲ್ಲೆಗೆ 7 ಶಾಲೆ: ಜಿಲ್ಲೆಗೆ 7 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನೀಡಲಾಗಿದೆ, ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಿಎಸ್‌ಆರ್ ಅನುದಾನವನ್ನು ಬಳಸಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿನ 101 ಮುಖ್ಯ ಶಾಲೆಗಳನ್ನು ಮುಂದಿನ 2 ವರ್ಷಗಳಲ್ಲಿ ನವೀಕರಣಗೊಳಿಸಲಾಗುವುದು. ಆಟದ ಮೈದಾನ, ಕುಡಿಯುವ ನೀರು ಸೌಲಭ್ಯ, ಶೌಚಗೃಹ ಸೇರಿ ಎಲ್ಲ ಮೂಲ ಸೌಲಭ್ಯಗಳನ್ನು ಒಳಗೊಂಡಂತೆ ಆಧುನಿಕವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿ, ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಂಸ್ಕಾರದ ಜತೆಗೆ ಶಿಕ್ಷಣ ಅವಶ್ಯ: ಮಕ್ಕಳಿಗೆ ಸಂಸ್ಕಾರದ ಜತೆಗೆ ಗುಣಮಟ್ಟದ ವಿದ್ಯಾಭ್ಯಾಸ ಕಲ್ಪಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಶಿಕ್ಷಕರು ಸಮಾಜದ ದಾರಿ ದೀಪವಾಗಿ ಶ್ರಮಿಸುತ್ತಿರುವ ಶ್ರೇಷ್ಠ ವ್ಯಕ್ತಿಗಳಾಗಿದ್ದಾರೆ ಎಂದು ಬಣ್ಣಿಸಿದರು. ಭಾರತರತ್ನ ಡಾ.ಎಸ್. ರಾಧಾಕೃಷ್ಣನ್ ರಾಷ್ಟ್ರಪತಿಗಳಾಗಿ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದರು, ಉತ್ತಮ ಶಿಕ್ಷಕರಾಗಿ ದೇಶ ಹಾಗೂ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಶ್ರೇಷ್ಠರು ಎಂದು ಸ್ಮರಿಸಿದರು. ಶಿಕ್ಷಕರು ಮಕ್ಕಳಿಗೆ ತಿದ್ದಿ, ಬುದ್ಧಿ ಹೇಳಿ ಒಳ್ಳೆಯ ಸಂಸ್ಕಾರ ಜತೆಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೇಲೆ ರಾಷ್ಟ್ರದ ಭವಿಷ್ಯ ನಿಂತಿದೆ. ಪ್ರತಿಯೊಬ್ಬರೂ ಗುರುವಿನ ಮಾರ್ಗದರ್ಶನ ಪಡೆಯುವ ಜತೆಗೆ ಅವರನ್ನು ಪ್ರೀತಿ ಗೌರವಿಸುವದನ್ನು ಪಾಲಿಸಿದರೆ ಜೀವನ ಉಜ್ವಲವಾಗುತ್ತದೆ ಎಂದರು.