ಜಿಲ್ಲೆಯ 5,800 ಶಿಕ್ಷಕರ ಕೋವಿಡ್ ಟೆಸ್ಟ ಬಾಕಿ

1414
Published on

ಬೆಳಗಾವಿ: ಜಿಲ್ಲೆಯಲ್ಲಿ ಶಾಲೆ ಆರಂಭಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿದ್ದು, 5,800 ಶಿಕ್ಷಕರ
ಕರೊನಾ ಟೆಸ್ಟ್ ಬಾಕಿ ಇದೆ.

ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ 21,665 ಶಿಕ್ಷಕರು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ 17,165 ಶಿಕ್ಷಕರ ಕೋವಿಡ್-19 ಪರೀಕ್ಷೆ ನಡೆಸಿದ್ದು, ಇದರಲ್ಲಿ 14 ಶಿಕ್ಷಕರು ಮತ್ತು ಸಿಬ್ಬಂದಿಗೆ ಈಗಾಗಲೇ ಸೋಂಕು ದೃಢಪಟ್ಟಿದೆ. ಅಲ್ಲದೆ, ಇನ್ನೂ 1 ಸಾವಿರಕ್ಕೂ ಅಧಿಕ ಶಿಕ್ಷಕರ ಪರೀಕ್ಷಾ ವರದಿ ಬಂದಿಲ್ಲ.

ಇನ್ನೂ ಬಾಕಿ ಉಳಿದಿರುವ 5,800 ಶಿಕ್ಷಕರ ಕೋವಿಡ್-19 ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ. ಈಗಾಗಲೇ ಶಾಲಾ ಆರಂಭದ ಪೂರ್ವದಲ್ಲಿ ವಿದ್ಯಾರ್ಥಿಗಳೇ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು ಬಂದಿರುವ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿಗಳನ್ನೂ ಕರೊನಾ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಅಲ್ಲದೆ, ಸೋಂಕು ಲಕ್ಷಣ ಕಂಡು ಬಂದರೆ ಅಂತಹ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿ ಮನೆಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಡಿಡಿಪಿಐಗಳಾದ ಗಜಾನನ ಮನ್ನಿಕೇರಿ ಹಾಗೂ ಡಾ. ಎ.ಬಿ. ಪುಂಡಲೀಕ ತಿಳಿಸಿದ್ದಾರೆ.

ಸರ್ಕಾರವು ಪದವಿ, ಪಿಯುಸಿ ಕಾಲೇಜ್ ವಿದ್ಯಾರ್ಥಿಗಳಿಗೆ ಕೋವಿಡ್-19 ಪರೀಕ್ಷೆ ಕಡ್ಡಾಯಗೊಳಿಸಿದ್ದರಿಂದ ಪ್ರತಿನಿತ್ಯ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಸಾವಿರಾರು ವಿದ್ಯಾರ್ಥಿಗಳು ಬಂದು ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ.

ಮೊಬೈಲ್‌ಗಳಿಗೆ ಒಟಿಪಿ ಬರುವುದು ವಿಳಂಬವಾಗುತ್ತಿದ್ದು, ಕೆಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿದಿನ 100 ಜನರನ್ನು ಮಾತ್ರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮುಂದಿನ ವಾರ ಶೇ. 80ರಷ್ಟು ಪರೀಕ್ಷೆ ಪ್ರಮಾಣ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಬಿ.ತುಕ್ಕಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net