ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ; ಡಾ.ಬಿ.ಸಿ.ಸತೀಶ

11adarshkdga6
Published on

ಮಡಿಕೇರಿ: ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಮೇ೧೩ ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.


ನಗರದ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿ, ಮತ ಎಣಿಕೆ ಪ್ರಕ್ರಿಯೆಯು ಮೇ೧೩ ರಂದು ಬೆಳಗ್ಗೆ ೮ ಗಂಟೆಗೆ ಆರಂಭವಾಗಲಿದೆ. ಚುನಾವಣಾ ಆಯೋಗದ ನಿಯಮದ ಪ್ರಕಾರ ಮತ ಎಣಿಕೆ ಕೈಗೊಳ್ಳಬೇಕು. ಮತ ಎಣಿಕೆ ಸ್ಥಳಕ್ಕೆ ಮೊಬೈಲ್ ತರಬಾರದು. ಮತ ಎಣಿಕೆ ಕಾರ್ಯ ಸರಳ ಪ್ರಕ್ರಿಯೆ ಆಗಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಹೇಳಿದರು.


ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ ಚುನಾವಣಾಧಿಕಾರಿ ಗಮನಕ್ಕೆ ತರಬೇಕು. ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಕಾರ್ಯನಿರ್ವಹಿಸಲಿದ್ದು, ಜತೆಗೆ ಮೈಕ್ರೋ ವೀಕ್ಷಕರು ಇರಲಿದ್ದಾರೆ. ಎದುರಿಗೆ ವಿವಿಧ ಪಕ್ಷದ ಏಜೆಂಟರು ಇರುತ್ತಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿವರಿಸಿದರು.


ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ಪ್ರತ್ಯೇಕವಾಗಿ ಮತ ಎಣಿಕೆ ಕಾರ್ಯ ನಡೆಯಲಿದೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ೧೪ ಟೇಬಲ್‌ಗಳಲ್ಲಿ ಮತ ಎಣಿಕೆ ನಡೆಯಲಿದ್ದು, ೨೦ ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಜತೆಗೆ ಅಂಚೆ ಮತ್ತು ಸೇವಾ ಮತದಾರರ ಪತ್ರ ಮತ ಎಣಿಕೆ ಕಾರ್ಯವೂ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.


ನಗರದ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಬ್ಯಾರಿಕೇಡ್ ಅಳವಡಿಕೆ, ಮತ ಎಣಿಕೆ ಕೇಂದ್ರದಲ್ಲಿ ಜಾಲರಿ ನಿರ್ಮಾಣ, ಟೇಬಲ್‌ಗಳ ಅಳವಡಿಕೆ, ಸಿಸಿಟಿವಿ ಅಳವಡಿಕೆ, ಸೂಕ್ತ ಪೊಲೀಸ್ ಬಂದೋ ಬಸ್ತ್ ಸೇರಿದಂತೆ ಹಲವು ಕಾರ್ಯಗಳನ್ನು ಮಾಡಲಾಗಿದೆ.


ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಚುನಾವಣಾಧಿಕಾರಿಗಳಾದ ಡಾ.ಯತೀಶ್ ಉಳ್ಳಾಲ್, ಶಬಾನಾ ಎಂ.ಶೇಕ್, ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಮೋದ್, ರಾಮಚಂದ್ರ, ಚುನಾವಣಾ ತಹಶೀಲ್ದಾರ್ ರವಿಶಂಕರ್, ಮತ ಎಣಿಕೆ ಅಧಿಕಾರಿಗಳು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net