

ಮಡಿಕೇರಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ವಿವಿಧ ಕಾರ್ಯಕ್ರಮಗಳು ಆರಂಭಗೊಂಡವು.
ಹರ್ ಘರ್ ತಿರಂಗಾ ಅಭಿಯಾನ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ವಿವಿಧ ಇಲಾಖೆ ಮೂಲಕ ನಡೆಯಲಿವೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿದ ಎಲ್ಲರೂ ತಮ್ಮ ಸೆಲ್ಫಿಗಳನ್ನು https://hargartiranga.com ನಲ್ಲಿ ಹಂಚಿಕೊಳ್ಳುವಂತೆ ಜಿಲ್ಲಾಧಿಕಾರಿ ಕೋರಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮದಂತೆ ವೈವಿಧ್ಯ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ, ವಸತಿ ಶಾಲೆಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವಿಕೆ ಅತೀ ಮುಖ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಈಗಾಗಲೇ ಶಾಲಾ-ಕಾಲೇಜು ಹಾಗೂ ಐತಿಹಾಸಿಕ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಹಾಗೂ ತಾ.ಪಂ.ಇಒ ಶೇಖರ್ ಮಾತನಾಡಿ, ಗ್ರಾ.ಪಂ.ಮಟ್ಟದಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮೂರು ದಿನಗಳ ಕಾಲ ನಡೆಯುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಶ್ರಮಿಸಲಾಗಿದೆ ಎಂದರು.
ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಅವಿರತ ಹೋರಾಟ ಮಾಡಿ, ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾಗಿ ಭಾರತ ಸ್ವಾತಂತ್ರ್ಯಕ್ಕೆ ೭೮ ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಹರ್ ಘರ್ ತಿರಂಗಾ ಅಭಿಯಾನವನ್ನು ಆ.೧೩ ರಿಂದ ೧೫ ರವರೆಗೆ ಕೊಡಗು ಜಿಲ್ಲೆಯಾದ್ಯಂತ ಸಾರ್ವಜನಿಕರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.