

ಉಡುಪಿ: ಶಿಕ್ಷಕರ ಅವಿತರ ಶ್ರಮದಿಂದಾಗಿ ರಾಜ್ಯದಲ್ಲಿಯೇ ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಕಳೆದ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.94 ರಷ್ಟು ಫಲಿತಾಂಶ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿತ್ತು. ಮುಂದಿನ ಬಾರಿ ಶೇ. 100 ಪ್ರತಿಶತ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಕಿದಿಯೂರು ಹೋಟೆಲ್ನ ಶೇಷಶಯನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಡಾ. ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ನಿಸ್ವಾರ್ಥ ಭಾವದಿಂದ ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುವ ಶಿಕ್ಷಕರ ಸೇವೆಯನ್ನು ಜೀವನದುದ್ದಕ್ಕೂ ನೆನೆಯವುದರ ಜೊತೆಗೆ ಅವರಿಂದ ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು. ಯುವ ಜನತೆಯು ಅನೇಕ ಕಾರಣಗಳಿಂದ ನಾನಾ ದುಷ್ಚಟಗಳಿಂದ ಒಳಗಾಗುವುದನ್ನು ತಡೆಗಟ್ಟಲು ಬಾಲ್ಯದಿಂದಲೇ ಜೀವನ ನಿರ್ವಹಣೆ ಆದರ್ಶವನ್ನು ಮನದಟ್ಟುಗೊಳಿಸಿ ದೇಶದ ಉತ್ತಮ ಪ್ರಜೆಯಾಗಿ ರೂಪಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್ ಮಾತನಾಡಿ, ಮಗುವನ್ನು ಬೆಳಸುವಲ್ಲಿ ತಾಯಿಯು ಮಹತ್ತರ ಪಾತ್ರ ವಹಿಸಿದರೆ, ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮತ್ತು ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ನಾಡೋಜ ಡಾ. ಜಿ.ಶಂಕರ್ ಮಾತನಾಡಿದರು.
ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸತರು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ, ಬ್ರಹ್ಮಾವರ ಬಿಇಒ ಶಬಾನಾ ಅಂಜುಮ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ವಿವಿಧ ಸಂಗಳ ಅಧ್ಯಕ್ಷರಾದ ಕಿರಣ್ ಹೆಗ್ಡೆ, ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಸಂಜೀವ ದೇವಾಡಿಗ, ವಿಜಯಕುಮಾರ್ ಶೆಟ್ಟಿ, ಅರುಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗರಾಜ್ ಮತ್ತು ಜ್ಯೋತಿ ನಿರೂಪಿಸಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ವಂದಿಸಿದರು.
ಪ್ರತಿಯೊಬ್ಬರ ಬದುಕಿನಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಅಂತರಂಗವನ್ನು ಬೆಳೆಸುವ ವ್ಯವಸ್ಥೆಯೇ ಶಿಕ್ಷಣ. ಅಂತಹ ಶಿಕ್ಷಣವನ್ನು ನೀಡುವ ಗುರುಗಳನ್ನು ಗೌರವದಿಂದ ಕಾಣಬೇಕಾದದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯ.ಗುರ್ಮೆ ಸುರೇಶ್ ಶೆಟ್ಟಿ, ಶಾಸಕರು, ಕಾಪು
ಸಮಾಜದಲ್ಲಿ ಗೌರವ ಇಟ್ಟುಕೊಂಡ ವ್ಯವಸ್ಥೆ ಶಿಕ್ಷಣ ಮತ್ತು ಶಿಕ್ಷಕರು. ವಿದ್ಯಾರ್ಥಿಗಳ ಏಳಿಗೆಯಲ್ಲಿ ತಮ್ಮ ಯಶಸ್ಸನ್ನು ಕಂಡುಕೊಳ್ಳುವ ಶಿಕ್ಷಕರು ಮಕ್ಕಳ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆ ನಿಲ್ಲುತ್ತಾರೆ.ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜಿಲ್ಲೆಯಲ್ಲಿ ಮಕ್ಕಳಿಗೆ ಬಾಲ್ಯದಲ್ಲಿಯೇ ಗುಣಮಟ್ಟದ ಶಿಸ್ತುಬದ್ಧ್ದ ಶಿಕ್ಷಣವನ್ನು ಶಿಕ್ಷಕರು ನೀಡುತ್ತಿದ್ದಾರೆ. ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯಲು ಮುಖ್ಯ ಕಾರಣೀಕರ್ತರು ಶಿಕ್ಷಕರು. ಮುಂದಿನ ದಿನಗಳಲ್ಲಿ ಈ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸಬೇಕು.ಯಶ್ಪಾಲ್ ಸುವರ್ಣ, ಶಾಸಕರು, ಉಡುಪಿ