

ವಿಜಯಪುರ : ನಗರದ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಗ್ಗೆ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರಯಾಣಿಕರಿಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಯಾವುದೇ ಪ್ರಯಾಣಿಕರಿಗೆ ಅನಾನುಕೂಲವಾಗದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ, ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರು, ಸೂಕ್ತ ಶೌಚಗೃಹ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ನಂತರ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ವೀಸಿ ಪರಿಶೀಲನೆ ನಡೆಸಿದ ಅವರು, ಕ್ಯಾಂಟೀನ್ ಮುಂಭಾಗದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ರಸ್ತೆ, ವಿವಿಧ ಕಾಮಗಾರಿ ಪರಿಶೀಲನೆ ಅಗತ್ಯ ಸಲಹೆ&ಸೂಚನೆ ನೀಡಿದರು.
ಬಸ್ ನಿಲ್ದಾಣ ಪಕ್ಕದ ನವಬಾಗ ರಸ್ತೆಯಲ್ಲಿನ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದ ಅವರು, ಬಳಿಕ ಲಲಿತ ಮಹಲ್ ಹೊಟೆಲ್ ಹತ್ತಿರದ ಕೋಟೆಗೋಡೆ ಪಕ್ಕದಲ್ಲಿ ಖಾಸಗಿ ಬಸ್ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೆ, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ನೀಡಿದರು.
ಬಳಿಕ ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಅನುಕೂಲಕ ಕಲ್ಪಿಸುವ ನಿಟ್ಟಿನಲ್ಲಿ ಸುಸಜ್ಜಿತ ವಾತಾವರಣ ನಿರ್ಮಾಣ, ಗ್ರಂಥಾಲಯಕ್ಕೆ ಆಗಮಿಸುವ ವಿದ್ಯಾರ್ಥಿಗಳು, ಓದುಗರಿಗೆ ಮೂಲ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮತ್ತಿತರರಿದ್ದರು.