ಕಬ್ಬಿನ ತೂಕ, ಇಳುವರಿಯಲ್ಲಿ ಸಕ್ಕರೆ ಕಾರ್ಖಾನೆಯಿಂದ ಮೋಸ: ಪರಿಶೀಲನೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ ಡಾ.ಕುಮಾರ

Mandya Dc Dr.Kumara
Published on

ಮಂಡ್ಯ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಮತ್ತು ಸಕ್ಕರೆ ಇಳುವರಿಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ತಾಂತ್ರಿಕ ವ್ಯಕ್ತಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶಿಸಿದ್ದಾರೆ.

ಜು.28ರಂದು ಆಯೋಜಿಸಿದ್ದ ರೈತರ ಕುಂದುಕೊರತೆ ಸಭೆಯಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಮತ್ತು ಉತ್ತಮ ಇಳುವರಿ ಇದ್ದರೂ ಉದ್ದೇಶಪೂರ್ವಕವಾಗಿ ಸಕ್ಕರೆ ಇಳುವರಿಯನ್ನು ಕಡಿಮೆ ತೋರಿಸುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಈ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೃಷಿ ಇಲಾಖೆ ಜಂಟಿ ನಿರ್ದೇಶಕರನ್ನು ಸಮಿತಿಯ ಸದಸ್ಯ ಕಾರ್ಯದರ್ಶಿಯನ್ನಾಗಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕರು ಸೇರಿದಂತೆ ವಿ.ಸಿ ಫಾರ್ಮ್ ವಲಯ ಕೃಷಿ ಸಂಶೋಧನಾ ಕೇಂದ್ರದ ಬೆಲ್ಲದ ಪಾರ್ಕ್ ಮುಖ್ಯಸ್ಥ ಡಾ.ಕೆ.ಕೇಶವಯ್ಯ, ನಿವೃತ್ತ ಪ್ರಾಧ್ಯಾಪಕ ಡಾ.ಸ್ವಾಮಿಗೌಡ ಹಾಗೂ ವಿ.ಸಿ.ಫಾರ್ಮ್‌ನ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ.ತಿಮ್ಮೇಗೌಡ ಅವರನ್ನು ಸದಸ್ಯರಾಗಿ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.

ಸಮಿತಿ ಜಿಲ್ಲೆಯ ಐದು ಸಕ್ಕರೆ ಕಾರ್ಖಾನೆಗಳಿಗೆ ಭೇಟಿ ನೀಡಿ ತೂಕದಲ್ಲಿ ಮೋಸ ಮಾಡಲಾಗುತ್ತಿದ್ದೆಯೇ ಹಾಗೂ ಸಕ್ಕರೆ ಇಳುವರಿಯನ್ನು ಉದ್ದೇಶಪೂರ್ವಕವಾಗಿ ಅಂದರೆ ಎಫ್‌ಆರ್‌ಪಿ ದರವನ್ನು ಕಡಿಮೆಗೆ ನಿಗದಿಪಡಿಸುವ ಉದ್ದೇಶದಿಂದ ಉತ್ತಮ ಇಳುವರಿ ಇದ್ದರೂ ಕಡಿಮೆ ತೋರಿಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ 3 ವಾರಗಳೊಳಗೆ ವರದಿ ನೀಡಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net