ಆಸಕ್ತಿಯಿಂದ ಕರ್ತವ್ಯ ನಿರ್ವಹಿಸಿ, ಅಧಿಕಾರಿಗಳಿಗೆ ಡಿಸಿ ಸೂಚನೆ

PRASHANTH KUMAR MISRA
ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
Published on

ಬಳ್ಳಾರಿ: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜನರಿಗೆ ಸಕಾಲಕ್ಕೆ ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಜನಪರ ಕೆಲಸಗಳು ತಮ್ಮವೆಂದು ಭಾವಿಸಿ ಆಸಕ್ತಿಯಿಂದ ನಿರ್ವಹಿಸಬೇಕು ಎಂದು ನೂತನ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೊಸದಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಗಳ ಜತೆ ಸಭೆ ನಡೆಸಿ ಮಂಗಳವಾರ ಮಾತನಾಡಿದರು.

ಎಲ್ಲ ಅಧಿಕಾರಿಗಳು ತಮ್ಮ ಸೇವೆಯಲ್ಲಿ ಬದ್ಧತೆ ತೋರಬೇಕು. ಸರ್ಕಾರದ ಯೋಜನೆಗಳನ್ನು ವಿಳಂಬ ಮಾಡದೆ ಸಾರ್ವಜನಿಕರಿಗೆ ತಲುಪಿಸುವಲ್ಲಿ ಶ್ರಮಿಸಿದರೆ ಒಳ್ಳೆಯ ಅಭಿಪ್ರಾಯ ಬರಲಿದೆ ಎಂದರು.

ಕೃಷಿ ಇಲಾಖೆ ಅಧಿಕಾರಿಯಿಂದ ಬಿತ್ತನೆ ಬೀಜ, ರಸಗೊಬ್ಬರ, ಬೆಳೆವಿಮೆ ಹಾಗೂ ರೈತರ ಆತ್ಮಹತ್ಯೆ ಸಂಬಂಧಿಸಿದಂತೆ ಪರಿಹಾರ ತಲುಪಿದೆಯೇ ಎಂಬ ಮಾಹಿತಿ ಪಡೆದರು. ಈ ಕುರಿತು ಆಯಾ ತಾಲೂಕು ತಹಸೀಲ್ದಾರರ ಜತೆ ಚರ್ಚಿಸಲಾಗುವುದು ಎಂದರು.

ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪಠ್ಯಪುಸ್ತಕ, ಸಮವಸ್ತ್ರ, ಶೂ ವಿತರಣೆ, ಶಾಲೆ ಬಿಟ್ಟ ಮಕ್ಕಳ ವಿವರ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯ, ಔಷಧಗಳ ವಿವರ, ಚಿಕಿತ್ಸೆ ವಿವರ ಪಡೆದುಕೊಂಡರು.

ಶಿಕ್ಷಣ, ಆರೋಗ್ಯ ಇತರ ಅಗತ್ಯ ಸೇವೆಗೆ ಆದ್ಯತೆ ನೀಡಲಾಗುವುದು ಎಂದ ಅವರು, ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಹಾಗೂ ವಸತಿ ನಿಲಯಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ, ಗರ್ಭಿಣಿಯರಿಗೆ ಪೌಷ್ಟಿಕ ಆಹಾರ, ತಾಯಿಕಾರ್ಡ್ ವಿತರಣೆ ಸೌಲಭ್ಯ ಕುರಿತು ಮಾಹಿತಿ ಪಡೆದರು. ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಕ್ಷೇತ್ರಭೇಟಿ ನಡೆಸಬೇಕು ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಆ.15 ರೊಳಗೆ ನಿಗದಿತ ಗುರಿ ತಲುಪಲು ಪ್ರಗತಿ ಸಾಧಿಸಬೇಕು. ಯೋಜನೆಗಳು ಸಾರ್ವಜನಿಕರಿಗೆಲ್ಲರಿಗೂ ತಲುಪುವಂತೆ ಕ್ರಮವಹಿಸಬೇಕು. ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಆರೋಗ್ಯ ಕೇಂದ್ರ, ವಸತಿ ನಿಲಯ ಕಟ್ಟಡಕ್ಕಾಗಿ ಸ್ಥಳದ ಕೊರತೆಯಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ, ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜತೆ ಪರಸ್ಪರ ಸಂಪರ್ಕದಲ್ಲಿರಬೇಕು. ತಾಲೂಕು ಮಟ್ಟದ ಅಧಿಕಾರಿಗಳ ಜತೆ ಚರ್ಚಿಸಬೇಕು ಎಂದರು.

ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಹಾಗೂ ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ಪಟ್ಟಿ ಮಾಡಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜೆಸ್ಕಾಂ ಸೇರಿದಂತೆ ಇತರ ಇಲಾಖೆಗಳ ಮಾಹಿತಿ ಪಡೆದುಕೊಂಡರು. ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net