ಸಹಕಾರಿ ಕ್ಷೇತ್ರದಿಂದ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ

udp-8-training
Published on

ಉಡುಪಿ: ಜಿಲ್ಲೆಯಲ್ಲಿ ಜನರು ವಿಶ್ವಾಸ ಮೇಲೆ ಸಹಕಾರಿ ಸಂಸ್ಥೆಗಳಲ್ಲಿ 4500 ಕೋಟಿ ರೂ. ಠೇವಣಿ ಇರಿಸಿದ್ದಾರೆ. ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಸಾಮಾಜಿಕ ಕಳಕಳಿಯ ಚಿಂತನೆ ಇಟ್ಟುಕೊಂಡು ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್​ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲೆಯ ಮೂರ್ತೆದಾರರ ಸಹಕಾರಿ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಆಯೋಜಿಸಿದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಪಾನ್​ ದೇಶದಲ್ಲಿ ಸಹಕಾರಿ ಬ್ಯಾಂಕ್​ಗಳ ಮೂಲಕವೇ ಶಿಕ್ಷಣ, ಆರೋಗ್ಯ, ಸಂಚಾರಕ ಸೇವೆ ಸಹಿತ ಎಲ್ಲಾ ವ್ಯವಹಾರಗಳು ನಡೆಯುತ್ತಿವೆ. ಇದು ಆರ್ಥಿಕ ಪ್ರಗತಿಗೆ ಕಾರಣವಾಗಿದೆ. ಕರಾವಳಿ ಭಾಗದಲ್ಲಿ ಸಹಕಾರಿ ಕ್ಷೇತ್ರ ಬ್ಯಾಂಕಿಂಗ್​ ವ್ಯವಹಾರಕ್ಕೆ ಮಾತ್ರ ತನ್ನ ಕಾರ್ಯವ್ಯಾಪ್ತಿಯನ್ನು ಸೀಮಿತಗೊಳಿಸಿದೆ. ಆದರೆ, ರಾಜ್ಯ ಬೇರೆ ಜಿಲ್ಲೆಗಳಲ್ಲಿ ಹಾಗೂ ಬೇರೆ ರಾಜ್ಯಗಳಲ್ಲಿ ವ್ಯವಹಾರಿಕವಾಗಿ ಅನೇಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದೆ. ಇಂತಹ ಬದಲಾವಣೆಗಳಿವೆ ನಾವೂ ತೆರೆದುಕೊಳ್ಳಬೇಕು ಎಂದು ಹೇಳಿದರು.

ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ನಿರ್ದೇಶಕರಾದ ಹರೀಶ್​ ಕಿಣಿ ಅಲೆವೂರು, ವೈ. ಸುಧೀರ್​ ಕುಮಾರ್​, ಮೂರ್ತೆದಾರರ ಜಿಲ್ಲಾ ಮಹಾಮಂಡಳದ ಉಪಾಧ್ಯಕ್ಷ ವಿಠಲ ಪೂಜಾರಿ, ಪ್ರಾಧ್ಯಾಪಕ ಸಂತೋಷ್​ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ಮುಖ್ಯ ಕಾರ್ಯನಿರ್ವಾಹಕಿ ಅನುಷಾ ಕೋಟ್ಯಾನ್​ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net