ಜಿಲ್ಲಾ ಉಪ ನಿರ್ದೇಶಕಿ, ಸಿಡಿಪಿಒ ಅಮಾನತು

19 vikram 10
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ. ಹುಲಿಗೆಮ್ಮ ಕುಕನೂರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಮುತ್ತಣ್ಣ ಸಿ.ಎ ಅವರನ್ನು ಅಮಾನತುಗೊಳಿಸಲಾಗಿದೆ.

ಹಳೇ ಹುಬ್ಬಳ್ಳಿಯ ಗಬ್ಬೂರು ಕ್ರಾಸ್​ ಬಳಿ ಇರುವ ಆಹಾರ ಗೋದಾಮಿನಲ್ಲಿ ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳಾದ ತೊಗರಿ ಬೇಳೆ, ಹೆಸರು ಕಾಳು, ಬೆಲ್ಲ, ಸಕ್ಕರೆ, ಗೋಧಿಹಿಟ್ಟನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಹೀಗಾಗಿ ಕರ್ತವ್ಯ ಲೋಪ ಎಸಗಿರುವ ಉಪ ನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಂಗನವಾಡಿಗೆ ಸರಬರಾಜು ಮಾಡಿರುವ ಸುಮಾರು 4 ಲಕ್ಷ ರೂ. ಮೌಲ್ಯದ ಆಹಾರ ಸಾಮಗ್ರಿಗಳು ಪತ್ತೆಯಾಗಿದ್ದವು. ಸಾಮಗ್ರಿಗಳ ಅಕ್ರಮ ದಾಸ್ತಾನಿಗೆ ಕಾರಣರಾದವರ ಮೇಲೆ ಕ್ರಮಕೈಗೊಳ್ಳಲು ಕಸಬಾಪೇಟ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಈ ಪ್ರಕರಣ ಗಮನಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್​, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸುವುದರ ಜತೆಗೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net