

ಉಡುಪಿ: ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ ಬರ ನಿರ್ವಹಣೆ ಸಮರ್ಪಕವಾಗಿ ಮಾಡಬೇಕು. ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಗುರುವಾರ ರಜತಾದ್ರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ಜಿಲ್ಲೆಯ ಕಾರ್ಕಳ, ಹೆಬ್ರಿ ಹಾಗೂ ಬ್ರಹ್ಮಾವರ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದೆ. ಪ್ರಸಕ್ತ ಸಾಲಿಗೆ ವಾಡಿಕೆ ಮಳೆಯು 4,535 ಇದ್ದು, ವಾಸ್ತವಿಕವಾಗಿ 3525 ಮಿ.ಮೀ. ನಷ್ಟು ಮಳೆಯಾಗಿ ಶೇ.22 ರಷ್ಟು ಕಡಿಮೆ ಮಳೆಯಾಗಿದೆ. ಅಂತರ್ಜಲ ಮಟ್ಟ ಹಾಗೂ ಜಲಾಶಯಗಳ ನೀರಿನ ಮಟ್ಟ ಕಡಿಮೆಯಾಗಿದ್ದು, ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಈಗಿನಿಂದಲೇ ಎಚ್ಚರ ವಹಿಸಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಜಿಲ್ಲೆಯಾದ್ಯಂತ ಪ್ರಸಕ್ತ ಮಾಹೆಯಲ್ಲಿ 44.1 ಮಿ.ಮೀ. ನಷ್ಟು ಮಳೆಯಾಗಿರುವ ಹಿನ್ನೆಲೆ, ನೀರಿನ ಕೊರತೆ ಆಗುವ ಸಾಧ್ಯತೆಗಳಿಲ್ಲದಿದ್ದರೂ ಸಹ ಅಂತರ್ಜಲ ಕುಸಿತಗೊಂಡು ಜಿಲ್ಲೆಯ ಯಾವುದೇ ಗ್ರಾಮ ಹಾಗೂ ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು. ಹೀಗಾಗಿ ನೀರಿನ ಮೂಲ ಅಥವಾ ಬೋರ್ವೆಲ್ಗಳಿಂದ ನೀರೊದಗಿಸಲು ಗುರುತಿಸಿಕೊಳ್ಳಬೇಕು. ಟ್ಯಾಂಕರ್ ಮೂಲಕ ನೀರು ಒದಗಿಸುವುದು ಅನಿವಾರ್ಯವಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಟೆಂಡರ್ ಕರೆದು ತಯಾರಿರಬೇಕು ಎಂದರು.
ಪ್ರತಿ ಹದಿನೈದು ದಿನಗಳಿಗೊಮ್ಮೆ ವಿಧಾನಸಭಾ ಕ್ಷೇತ್ರಮಟ್ಟದಲ್ಲಿ ಸ್ಥಳಿಯ ಶಾಸಕರ ಅಧ್ಯಕ್ಷತೆಯಲ್ಲಿ ಬರಪೀಡಿತ ತಾಲೂಕುಗಳ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯನ್ನು ಕರೆದು, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ 2,25,000 ಕ್ಕೂ ಹೆಚ್ಚು ಜಾನುವಾರುಗಳಿದ್ದು, 2,41,925 ಟನ್ನಷ್ಟು ಮೇವು ಲಭ್ಯವಿದೆ. ರೈತರಿಗೆ ಪಶುಸಂಗೋಪನಾ ಇಲಾಖೆಯಿಂದ 1426 ಕಿಟ್ಗಳು ಹಾಗೂ ಕೆ.ಎಂ.ಎಫ್ ವತಿಯಿಂದ 3,000 ಕ್ಕೂ ಹೆಚ್ಚುಮೇವಿನ ಕಿಟ್ ಅನ್ನು ವಿತರಿಸಲಾಗಿದೆ. ಕೃಷಿ, ತೋಟಗಾರಿಕೆ ಇಲಾಖೆಗೆ ಸೇರಿದ ಫಾಮ್ರ್ಗಳಲ್ಲಿ ಮೇವುಗಳನ್ನು ಬೆಳೆಯಲು ಕ್ರಮ ವಹಿಸಬೇಕು ಎಂದರು.
ಮುಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ತೋಡು ಹಾಗೂ ಚರಂಡಿಗಳಲ್ಲಿರುವ ಹೂಳು, ತರಗೆಲೆ, ಕಸ-ಕಡ್ಡಿಗಳನ್ನು ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಪೈಪ್ಲೈನ್ ದುರಸ್ಥಿ, ಶುದ್ಧ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ, ಸರಕಾರಿ ಕಟ್ಟಡಗಳ ಮೇಲ್ಛಾವಣಿಯಲ್ಲಿರುವ ಕಸ-ಕಡ್ಡಿಗಳನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಟಿ.ಎಸ್ ಸಿದ್ಧಲಿಂಗಪ್ಪ ಹಾಗೂ ಕೆ.ಎಸ್. ಹೆಗ್ಡೆ, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್. ಉಪಸ್ಥಿತರಿದ್ದರು.