

ಕೊಪ್ಪಳ: ಜಿಲ್ಲೆಯಲ್ಲಿ ಫೆಬ್ರವರಿ ಮೊದಲ ವಾರ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ಜಿಪಂ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದು, ಪಂಚ ಗ್ಯಾರಂಟಿಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿಸಲಿದ್ದಾರೆ. ಹೀಗಾಗಿ ಗೃಹಲಕ್ಷಿ$್ಮ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಲಾಭ ಪಡೆದುಕೊಂಡ ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆ ತರಬೇಕು ಎಂದರು.
ಫಲಾನುಭವಿಗಳನ್ನು ಸೇರಿಸಲು ಅನುಷ್ಠಾನ ಸಮಿತಿಯ ತಾಲೂಕಾಧ್ಯಕ್ಷರು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಿ. ಈ ಹಿನ್ನೆಲೆಯಲ್ಲಿ ತಾಲೂಕುವಾರು ಸಭೆಗಳನ್ನು ನಡೆಸಬೇಕು. ಇದಕ್ಕೆ ಸಮಿತಿ ಸದಸ್ಯರು ಸಹಕಾರ ನೀಡಬೇಕು. ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಜನಪರ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿಗಳಿಗೆ ಯೋಜನೆ ಲಾಭ ಸಿಗುವಂತಾಗಬೇಕು. ಅರ್ಹರು ಯೋಜನೆಗಳಿಂದ ಹೊರಗುಳಿಯದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶಕ್ಕಾಗಿ 1.50 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿ ಇದ್ದು, ವಿಧಾನಸಭಾ ಕ್ಷೇತ್ರಗಳ ತಲಾ 20 ಸಾವಿರ ಮತ್ತು ಜಿಲ್ಲಾ ಕೇಂದ್ರದಿಂದ 25 ಸಾವಿರ ಫಲಾನುಭವಿಗಳನ್ನು ಸೇರಿಸಬೇಕು. ಅನ್ನಭಾಗ್ಯ ಯೋಜನೆಯಡಿ ಜಿಲ್ಲಾ ಕೇಂದ್ರದಿಂದ 15 ಸಾವಿರ ಮತ್ತು ವಿವಿಧ ವಿಧಾನಸಭಾ ಕ್ಷೇತ್ರವಾರು ಐದು ಸಾವಿರದಂತೆ, ಯುವನಿಧಿ ಯೋಜನೆಯಡಿ ಜಿಲ್ಲೆಯ ಒಂದು ಸಾವಿರ ಹಾಗೂ ಗೃಹಜ್ಯೋತಿ ಯೋಜನೆಯಡಿ ಲಾಭ ಪಡೆದ ಜಿಲ್ಲೆಯ 10 ಸಾವಿರ ಫಲಾನುಭವಿಗಳನ್ನು ಕರೆ ತರಲು ಸಂಬಂಧಪಟ್ಟ ಅನುಷ್ಠಾನಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗರಜ ಅರಳಿ, ಮಂಜುನಾಥ ಗೊಂಡಬಾಳ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ತಾಲೂಕಾಧ್ಯಕ್ಷರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.