

ಗದಗ: ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಬುಧವಾರದಂದು ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ ನುಚ್ಚಿನ ಅವರು ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಕುರಿತು ವಿವರಿಸುತ್ತಾ ಜಿಲ್ಲೆಯಲ್ಲಿ ಕಳೆದ ವರ್ಷ ಒಟ್ಟು 100 ಶಾಲಾಕಾಲೇಜುಗಳಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಂಡು ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಲಾಗಿದೆ. ಕೋಟ್ಪಾ ದಾಳಿ ಹಮ್ಮಿಕೊಳ್ಳುವದರ ಮೂಲಕ ವ್ಯಾಪಾರಸ್ಥರು, ತಂಬಾಕು ಬಳಕೆದಾರರಿಗೆ ಹಾಗೂ ಸಾರ್ವಜನಿಕರಲ್ಲಿ ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದರು.
ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಂಡು 55 ಕೋಟ್ಪಾ ದಾಳಿ ನಡೆಸಿ 575 ಪ್ರಕರಣಗಳನ್ನು ದಾಖಲಿಸಿ ರೂ.70600/- ದಂಡ ಸಂಗ್ರಹಿಸಲಾಗಿದೆ. ಕೋಟ್ಪಾ ಅನುಷ್ಟಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಈ ವರ್ಷ ಒಟ್ಟು 2061 ಅರ್ಥಿಗಳಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಎಲ್ಲ ಸಂಘ ಸಮಸ್ಥೆಗಳು ಕೈಜೋಡಿಸಬೇಕು. ಸ್ಥಳಿಯ ಸಂಸ್ಥೆಗಳವರು ಎಲ್ಲಾ ಅಂಗಡಿ ಮುಂಗಟ್ಟುಗಳ ಮುಂದೆ ಧೂಮಪಾನ ನಿಷೇಧ ಹಾಗೂ 18 ವರ್ಷದೊಳಗಿನ ತಂಬಾಕು ನಿಷೇಧ ಕುರಿತು ನಾಮಫಲಕ ಬಿತ್ತರಿಸುವಂತೆ ಕ್ರಮ ಕೈಗೊಳ್ಳುವದು ಹಾಗೂ ಬಿತ್ತರಿಸಿರುವ ಕುರಿತು ಮೇಲ್ವಚಾರಣೆ ಮಾಡಿ ಕ್ರಮ ಕೈಗೊಳ್ಳಬೇಕೆಂದರು. ಎಲ್ಲಾ ಇಲಾಖೆಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿನ ಪ್ರದೇಶ, ಸ್ಥಳಗಳನ್ನು ತಂಬಾಕು ಮುಕ್ತವೆಂದು ಘೋಷಣೆ ಮಾಡಲು ಕ್ರಮ ಕೈಗೊಳ್ಳಬೇಕು. ಸಂಘ ಸಂಸ್ಥೆಗಳ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಕುರಿತು ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿ.ಸಿ.ಕರಿಗೌಡ್ರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಅರುಂಧತಿ ಕೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ಕೆ.ಭಜಂತ್ರಿ, ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ರಾಜೇಂದ್ರ ಬಸರಿಗಿಡದ, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಸಹಾಯಕ ಔಷಧ ನಿಯಂತ್ರಣಾಧಿಕಾರಿ ಡಾ. ಧನಂಜಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು ಹಾಜರಿದ್ದರು.