

ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು, ಹೆಣ್ಣು ಭ್ರೂಣ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಪರಾಧ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿಯ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೆಣ್ಣು ಭ್ರೂಣ ಹತ್ಯೆಯಿಂದಾಗಿ ಸಮಾಜದಲ್ಲಿ ಲಿಂಗಾನುಪಾತದಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಗಂಡು ಹೆಣ್ಣಿನ ಅನುಪಾತದಲ್ಲಿ ಸಮತೋಲನ ಸಾಧಿಸಲು ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆಯನ್ನು ನಿಯಂತ್ರಣಕ್ಕೆ ತರಬೇಕು. ಭ್ರೂಣಲಿಂಗ ಪತ್ತೆ ಮಾಡುವ ವೈದ್ಯಾಧಿಕಾರಿಗಳು ಹಾಗೂ ಸ್ಕಾö್ಯನಿಂಗ್ ಸೆಂಟರ್‌ಗಳ ಮಾಲೀಕರುಗಳಿಗೆ ಹತ್ತು ಸಾವಿರ ರೂ. ದಂಡ ಹಾಗೂ ೩ ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಇದೇ ಅಪರಾಧ ಪುನರಾವರ್ತನೆಯಾದಲ್ಲಿ ಐವತ್ತು ಸಾವಿರ ರೂ. ದಂಡ, ೫ ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದರು.
ಜಿಲ್ಲೆಯ ಯಾವುದೇ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ, ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಬೇಕು. ಒಂದು ವೇಳೆ ಭ್ರೂಣ ಲಿಂಗ ಪತ್ತೆ ಮಾಡುವ ವೈದ್ಯರ ಮಾಹಿತಿ ನೀಡಿ, ಪ್ರಕರಣ ಸಾಬೀತಾದಲ್ಲಿ ಮಾಹಿತಿ ನೀಡಿದವರಿಗೆ ೫೦,೦೦೦ ರೂ. ಬಹುಮಾನ ನೀಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ.ಗಡಾದ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್, ಮಣಿಪಾಲ ಕೆ.ಎಂ.ಸಿ ಯ ಮಕ್ಕಳ ತಜ್ಞ ಡಾ. ಕಿರಣ ಹೆಬ್ಬಾರ್, ಡಾ. ಗಣೇಶ್ ಪೈ, ಡಾ. ಆಮ್ನಾ ಹೆಗ್ಡೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಡಾ. ದೀಕ್ಷಿತಾ, ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ. ಅನಿತಾ ಪ್ರಭು ಹಾಗೂ ಮತ್ತಿತರರು ಉಪಸ್ಥಿತರಿದ್ದರು.