

ಉಡುಪಿ: ಸಿರಿಧಾನ್ಯಗಳನ್ನು ದೈನಂದಿನ ಆಹಾರ ಸೇವನೆಯಲ್ಲಿ ಬಳಕೆಮಾಡಿಕೊಂಡಲ್ಲಿ ಆರೋಗ್ಯವೃದ್ಧಿಯಾಗುತ್ತದೆ. ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಬಳಕೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ ಸಿರಿಧಾನ್ಯಗಳ ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಶುಕ್ರವಾರ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಖಾದ್ಯಗಳ ಪಾಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಪೂರ್ವಜರು ಪಾರಂಪರಿಕ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಸಾವಯವ ಗೊಬ್ಬರವನ್ನು ಉಪಯೋಗಿಸಿ, ಅಲ್ಪ ಪ್ರಮಾಣದ ನೀರಿನ ಬಳಕೆಯೊಂದಿಗೆ ಸಿರಿಧಾನ್ಯಗಳನ್ನು ಬೆಳೆಯುತ್ತಿದ್ದರು. ರಾಗಿ, ನವಣೆ, ಸಾಮೆ, ಸಜ್ಜೆ, ಹಾರಕ, ಕೊರಲೆ, ಬರಗು, ಉದಲು ಹಾಗೂ ಜೋಳ ಇವು ನಮ್ಮ ಸಾಂಪ್ರದಾಯಿಕ ಬೆಳೆಗಳಾಗಿದ್ದು, ನಮ್ಮ ಆಹಾರ ಸಂಸತಿಯ ಅವಿಭಾಜ್ಯ ಅಂಗಗಳಾಗಿದ್ದವು. ಆಧುನಿಕತೆಗೆ ಮಾರುಹೋಗಿ ಇವುಗಳ ಉತ್ಪಾದನೆ ಹಿನ್ನೆಡೆಯಾಗಿತ್ತು. ಇವುಗಳಲ್ಲಿ ಪೌಷ್ಠಿಕ ಸತ್ವಗಳು ಸಹ ಹೆಚ್ಚು ಇರುತ್ತದೆ. ಹೀಗಾಗಿ ಜನಸಾಮಾನ್ಯರು ಪ್ರತಿನಿತ್ಯದ ಆಹಾರ ಪದಾರ್ಥಗಳಲ್ಲಿ ಬಳಕೆಮಾಡಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾತನಾಡಿ, ಜನರ ಜೀವನಶೈಲಿ ಬದಲಾಗುತ್ತಿದ್ದಂತೆ ಆಹಾರ ಪದ್ದತಿಯಲ್ಲಿಯೂ ಬದಲಾವಣೆ ಕಂಡುಬರುವುದರಿಂದ ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯಗಳನ್ನು ಬಳಸುವವರ ಸಂಖ್ಯೆ ತೀರಾ ಇಳಿಕೆಯಾಗಿದೆ. ಪ್ರತಿಯೊಬ್ಬರು ಸಿರಿಧಾನ್ಯಗಳಿಂದ ದೊರೆಯುವ ಪೌಷ್ಠಿಕಾಂಶಗಳ ಕುರಿತು ಮಾಹಿತಿ ಪಡೆದು ಬಳಸಬೇಕು. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ. ಸ್ವಾಗತಿಸಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ನಿರೂಪಿಸಿ, ವಂದಿಸಿದರು.