

ಮಂಡ್ಯ: ಜಿಲ್ಲೆಯ ಕೆಲ ಶಾಲೆ, ಕಾಲೇಜು ಆವರಣದ ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಶಾಲೆಯ ಸುತ್ತಮುತ್ತಲು 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವಾಗುತ್ತಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಯ ಆವರಣದಿಂದ 100 ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ತಂಬಾಕು ಮಾರಾಟ ಮಾಡುವಂತಿಲ್ಲ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಒಂದು ವೇಳೆ ಮಾರಾಟ ಮಾಡುತ್ತಿದ್ದರೆ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ’ತಂಬಾಕು ಮುಕ್ತ ಯುವ ಅಭಿಯಾನ 2.0’ ನಡೆಸಿದ ಸಾಧನೆಯ ಕುರಿತು ವಿವರಿಸಿದ ಎಡಿಸಿ, ತಂಬಾಕು ಮುಕ್ತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವಂತೆ ತಿಳಿಸಿದರು.
ಡಿ.16ರಂದು ಮಾಪ್ ಅಪ್ ದಿನ: ಜಿಲ್ಲೆಯಲ್ಲಿ ಡಿ.16ರಂದು ಮಾಪ್ ಅಪ್ ದಿನ ಆಚರಿಸಲಾಗುತ್ತಿದೆ. ಅಂದು ಎಲ್ಲ ಮಕ್ಕಳಿಗೆ ಉಚಿತವಾಗಿ ಆಲ್‌ಬೆಂಡಾಜೋಲ್ ಮಾತ್ರೆ ವಿತರಿಸಲಾಗುವುದು. ಎಲ್ಲ ಮಕ್ಕಳು ಮತ್ತು ಪಾಲಕರು ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಕಾಂತರಾಜ ಇತರರಿದ್ದರು. ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣದ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.