

ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಜಿಲ್ಲೆಯಲ್ಲಿ ಬೇಸಿಲ ತಾಪಮಾನ ಹೆಚ್ಚಿರುವ ಕಾರಣ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಹಾಗಾಗಿ ಅಂತಹ ಸ್ಥಳಗಳಲ್ಲಿ ಮುಂಚಿತವಾಗಿಯೇ ಕುಡಿಯುವ ನೀರು ಪೂರೈಕೆಗೆ ಆಯಾ ತಹಸೀಲ್ದಾರ್, ಸಂಬಂಧಿಸಿದ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಡಿಯಲ್ಲಿ ವಿವಿಧ ಕಾಮಗಾರಿ ಕೈಗೊಳ್ಳಲು ಸಲ್ಲಿಸಲಾದ ಪ್ರಸ್ತಾವನೆಗೆ ಅನುಮತಿ ದೊರಕಿದ್ದು, ಪ್ರಸ್ತಾವನೆಗೆ ಅನುಗುಣವಾಗಿ ಕಾಮಗಾರಿ ಪ್ರಾರರಂಭಿಸಲು ಕ್ರಮ ವಹಿಸುವಂತೆ ತಿಳಿಸಿದರು.
ಅಗತ್ಯ ಬಿದ್ದರೆ ಟ್ಯಾಂಕರ್ ನೀರು:ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾದಲ್ಲಿ ಕುಡಿಯುವ ನೀರು ಪೂರೈಕೆಗೆ ಸಿದ್ಧತೆಯಲ್ಲಿ ಇರಬೇಕು. ಒಂದು ವೇಳೆ ನೀರಿನ ಸಮಸ್ಯೆಯಾದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಅಗತ್ಯ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ತಿಳಿಸಿದರು. ಬೇಸಿಗೆ ದಿನದಲ್ಲಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಮನದಲ್ಲಿಟ್ಟುಕೊಂಡು ನೀರು ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು.
ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾದಲ್ಲಿ ಆಯಾ ಪಂಚಾಯಿತಿಗಳಿಂದ ನೀರು ಸರಬರಾಜು ಮಾಡಲು ಸೂಚನೆ ನೀಡಲಾಗಿದೆ. ಬರುವ ದಿನಗಳಲ್ಲಿ ಬೇಸಿಗೆ ನಿರ್ವಹಣೆಗೆ ಖಾಸಗಿ ಟ್ಯಾಂಕರ್‌ಗಳಿಂದ ನೀರು ಪೂರೈಕೆಗೆ ಟೆಂಡರ್ ಪ್ರಕ್ರಿಯೆಗೆ ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ, ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ., ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.