ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ

District Level Government Employees Association Sports Meet Mandya
Published on

ಮಂಡ್ಯ: ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಪ್ರತಿದಿನ ಕೆಲಸ ನಿರ್ವಹಿಸಲು ಮಾನಸಿಕ ಮತ್ತು ದೈಹಿಕವಾಗಿ ಸಧೃಡರಾಗಲು ದೇಹವನ್ನು ದಂಡಿಸುವ ಕ್ರೀಡೆ, ವ್ಯಾಯಮ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ಕ್ರೀಡಾಸಕ್ತಿಯನ್ನು ಬೆಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ಚಟುವಟಿಕೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಅತಿ ಮುಖ್ಯ ಎಂದು ಹೇಳಿದರು.

ಜಿಲ್ಲಾಮಟ್ಟದಲ್ಲಿ ವಿಜೇತರಾದವರು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ. ಈಗಾಗಲೇ ಅನೇಕ ಸರ್ಕಾರಿ ನೌಕರರು ತಮ್ಮ ಕೆಲಸ ಕಾರ್ಯಗಳ ಜತೆಗೆ ಕ್ರೀಡೆಯಲ್ಲಿ ಅನೇಕ ಸಾಧನೆ ಮಾಡಿದ್ದಾರೆ. ಕೇವಲ ಕ್ರೀಡೆಯಲ್ಲದೆ ಸರ್ಕಾರಿ ನೌಕರರಲ್ಲಿರುವ ವಿಶೇಷವಾದ ಪ್ರತಿಭೆ ಅನಾವರಣಗೊಳಿಸಲು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ಕಾರಿ ನೌಕರರ ಸಂಘ ಮತ್ತು ಜಿಲ್ಲಾಡಳಿತ ನಿಮ್ಮೆಲ್ಲರಿಗೂ ಉತ್ತಮ ವೇದಿಕೆಯನ್ನು ಕಲ್ಪಿಸಿದೆ. ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಸದೃಢತೆಯನ್ನು ಕಾಪಾಡಿಕೊಳ್ಳಬೇಕು. ಎಲ್ಲರೂ ತಮ್ಮ ದಿನನಿತ್ಯದ ಜೀವನದಲ್ಲಿ ಯೋಗ, ಧ್ಯಾನ, ಕ್ರೀಡೆಯಂತಹ ಉತ್ತಮ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಳ್ಳಬೇಕು. ಇದರಿಂದ ವೃತ್ತಿಜೀವನದಲ್ಲಿ ಹಾಗೂ ವೈಯಕ್ತಿಕ ಜೀವನ ಸುಸ್ಥಿರರಾಗಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ನಾಗೇಶ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಉಪ ನಿರ್ದೇಶಕ ಓಂ ಪ್ರಕಾಶ್, ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕಿ ವರಲಕ್ಷ್ಮೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಶಂಭುಗೌಡ, ಖಜಾಂಚಿ ಹೇಮಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net