ಗ್ಯಾರಂಟಿ ಯೋಜನೆಗಳ ಅರಿವು ಅಗತ್ಯ: ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ ಹೇಳಿಕೆ

District level guarantee scheme progress review meeting Mandya
Published on

ಮಂಡ್ಯ: ಜಿಲ್ಲೆಯಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಫಲಾನುಭವಿಗಳು ಪಡೆಯುತ್ತಿದ್ದಾರೆ. ಈ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಅಗತ್ಯವಾಗಿದೆ. ಅರ್ಹರು ಸೌಲಭ್ಯದಿಂದ ವಂಚಿತರಾಗಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ತಿಂಗಳು 15 ಹಾಗೂ 30 ರಂದು ಸರ್ಕಾರದ 5 ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಯುವ ನಿಧಿ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು. ಸಂಬಂಧಿಸಿದ ಯೋಜನೆಗಳ ಪ್ರಗತಿ ವರದಿಯನ್ನು ಸಂಬಂಧಪಟ್ಟ ಇಲಾಖೆಯು ಸಲ್ಲಿಸಬೇಕು ಎಂದರು.

ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಗಳ ಖಾತೆಗೆ ಸಂಬಂಧಪಟ್ಟ ಖಾತೆ ಸಂಖ್ಯೆ, ಆಧಾರ್ ಸೀಡಿಂಗ್, ಇಕೆವೈಸಿಯ ಕೆಲವು ಲೋಪದೋಷಗಳನ್ನು ಸರಿಪಡಿಸಿಕೊಳ್ಳಬೇಕು. ಬಳಿಕ ನೇರವಾಗಿ ಅರ್ಹ ಫಲಾನುಭವಿ ಖಾತೆಗೆ ಹಣವನ್ನು ಜಮೆ ಮಾಡಲಾಗುವುದು. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2023 ನೇ ಸಾಲಿನ ಆಗಸ್ಟ್ ಮಾಹೆಯಿಂದ 2024ರ ಸೆಪ್ಟೆಂಬರ್‌ವರೆಗೆ ಫಲಾನುಭವಿಗಳಿಗೆ ಶೇ. 99.32ರಷ್ಟು ಮೊತ್ತವನ್ನು ಪಾವತಿಸಲಾಗಿದೆ. ಉಳಿದ ಕೆಲವು ತಾಂತ್ರಿಕ ದೋಷವಿರುವ ಫಲಾನುಭವಿಗಳಿಗೆ ಸಮಸ್ಯೆಯನ್ನು ಬಗೆಹರಿಸಿಕೊಂಡ ನಂತರ ಎಲ್ಲ ತಿಂಗಳ ಬಾಕಿ ಮೊತ್ತವನ್ನು ಒಟ್ಟಿಗೆ ಅವರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆ ನಡೆಸಿ ಅರಿವು ಮೂಡಿಸಬೇಕು. ಗ್ರಾಮ ಸಭೆಯಲ್ಲಿ ಯೋಜನೆಗಳ ಬಗ್ಗೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ಕಡ್ಡಾಯವಾಗಿ ಒಳಗೊಂಡಂತೆ ಸಭೆಯಲ್ಲಿ ಚರ್ಚಿಸಿ, ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಯಾವುದೇ ಅರ್ಹ ಫಲಾನುಭವಿ ಯೋಜನೆಯಿಂದ ವಂಚಿತರಾಗಬಾರದು ಎಂದರು.

ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ.ಸಿ.ಪ್ರಶಾಂತ್ ಬಾಬು, ಎಸ್.ಎಚ್.ರಾಜೇಂದ್ರ, ಶಿವಣ್ಣ, ಕೆ.ಹನುಮಂತಯ್ಯ, ಜಿಪಂ ಮುಖ್ಯ ಯೋಜನಾಧಿಕಾರಿ ಎಸ್.ಧನುಷ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಸೆಸ್ಕ್‌ನ ಸೋಮಶೇಖರ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ನವೀನ್ ಕುಮಾರ್, ಕೆಎಸ್‌ಆರ್‌ಟಿಸಿ ವಿಭಾಗದ ಪರಮೇಶ್ವರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net