

ಮಂಡ್ಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಯೋಜನೆಗೆ ಸಂಬಂಧಿಸಿದಂತೆ ಸರಿಯಾಗಿ ಕಾರ್ಯ ನಿರ್ವಹಿಸದ ಹಾಗೂ ತಾಲೂಕು ಮಟ್ಟದಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯದ ಕುಂದು ಕೊರತೆ ಸಭೆ ಮಾಡದ ತಹಸೀಲ್ದಾರ್‌ಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ಜಿಲ್ಲಾಮಟ್ಟದ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಅಸ್ಪೃಶ್ಯತೆ ಆಚರಣೆಗೆ ಅವಕಾಶವಿಲ್ಲ. ಎಲ್ಲ ವರ್ಗದ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಎಂಬ ನಾಮಫಲಕವನ್ನು ದೇವಸ್ಥಾನಗಳಲ್ಲಿ ಅನಾವರಣಗೊಳಿಸುವಂತೆ ಈ ಹಿಂದಿನ ಸಭೆಗಳಲ್ಲಿ ಸೂಚಿಸಲಾಗಿತ್ತು. ಆ ನಾಮಫಲಕವನ್ನು ಕಿಡಿಗೇಡಿಗಳು ತೆರವುಗೊಳಿಸಿದ್ದಲ್ಲಿ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.
ಜಿಲ್ಲಾದ್ಯಂತ ಅಪೂರ್ಣಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಈಗಾಗಲೇ ಏಳೆಂಟು ವರ್ಷದ ಹಿಂದೆ ಪೂರ್ಣಗೊಂಡಿರುವ ಹಾಗೂ ಮೂಲ ಸೌಕರ್ಯ ಕೊರತೆಯಿರುವ ಭವನಗಳಲ್ಲಿ ನೀರು ಹಾಗೂ ಶೌಚಗೃಹವನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಸಂಬಂಧಿಸಿದ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ಹಣ ಪಾವತಿಸಿ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ, ಯುವತಿಯರಿಗೆ ಕೌಶಲಾಭಿವೃದ್ಧಿ ಇಲಾಖಾ ವತಿಯಿಂದ ನೋಂದಾಯಿತವಾಗಿರುವ ತರಬೇತಿ ಕೇಂದ್ರಗಳಲ್ಲಿ ಬ್ಯೂಟಿಷಿಯನ್ ತರಬೇತಿ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಪತ್ರಿಕೆಗಳ ಮೂಲಕ ವ್ಯಾಪಕ ಪ್ರಚಾರವಾಗಬೇಕು ಎಂದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶವವನ್ನು ಸ್ಮಶಾನಕ್ಕೆ ಹೊತ್ತೊಯ್ಯಲು ವಾಹನದ ವ್ಯವಸ್ಥೆ ಇರುತ್ತದೆ. ಆದರೆ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಲ್ಲಿ ವ್ಯವಸ್ಥೆ ಕಲ್ಪಿಸಲು ಚಿಂತಿಸಲಾಗುವುದು. ಯಾವುದೇ ಸರ್ಕಾರಿ ಇಲಾಖೆಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಪರಿಶಿಷ್ಟ ಜಾತಿ/ವರ್ಗದ ಹೆಸರಿನಲ್ಲಿ ಅನ್ಯರಿಗೆ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ದೂರು ಬಂದಲ್ಲಿ ಅಥವಾ ಸಾಬಿತಾದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ ಡಿಸಿ, ಲೋಕೋಪಯೋಗಿ ಇಲಾಖೆ ಹಾಗೂ ಜಿಪಂ ಇಂಜಿನಿಯರಿಂಗ್ ವಿಭಾಗ, ಇನ್ನಿತರೆ ಇಲಾಖೆಗಳು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಅನುದಾನದಡಿ ರಸ್ತೆ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಶೇ.40ರಷ್ಟು ಮೀಸಲು ಇರಬೇಕೆಂಬ ನಿಯಮವಿದೆ. ಇದರೊಂದಿಗೆ ಕಾಮಗಾರಿ ಕೈಗೊಳ್ಳುವ ಮುನ್ನ ಜಿಲ್ಲಾ/ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಅನುಮತಿ ಕಡ್ಡಾಯ ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಜಿಪಂ ಉಪ ಕಾರ್ಯದರ್ಶಿ ಆನಂದ್‌ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ.ಸಿದ್ದಲಿಂಗೇಶ್ ಇತರರಿದ್ದರು.