

ಕಡೂರು: ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನ.26ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ ಆಯೋಜಿಸಲಾಗಿದೆ ಎಂದು ತರೀಕೆರೆ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜು ತಿಳಿಸಿದರು.
ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಅಹವಾಲು ಸಲ್ಲಿಸಲು ಪ್ರತ್ಯೇಕ ಕೌಂಟರ್ ತೆರೆಯಲಾಗುತ್ತದೆ. ಈಗಾಗಲೇ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಭೆ ಮಾಹಿತಿ ಪ್ರಚಾರ ಪಡಿಸಲಾಗಿದೆ. ಅಂದಿನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬಹುತೇಕ ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಸಂಬಂಧಿಸಿದ ಸಮಸ್ಯೆಗಳನ್ನು ಅರ್ಜಿ ಮೂಲಕ ಸಭೆಯಲ್ಲಿ ಸಲ್ಲಿಸಬಹುದು ಎಂದರು.
ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿನ ಸಮಸ್ಯೆಗಳನ್ನು ಸಲ್ಲಿಸಲು ತಮ್ಮ ವ್ಯಾಪ್ತಿಯ ನಾಡಕಚೇರಿ ಹಾಗೂ ಪಂಚಾಯಿತಿಗಳಲ್ಲಿ ಅರ್ಜಿನೀಡಲು ಅವಕಾಶ ಕಲ್ಪಿಸಲಾಗಿದೆ. ನ.26ರ ಮಂಗಳವಾರ ಬೆಳಗ್ಗೆ 11.30ಕ್ಕೆ ಸಭೆ ನಡೆಯಲಿದೆ. ಸಭೆಗೂ ಮುನ್ನಾ ಸಿಂಗಟಗೆರೆ ಗ್ರಾಮದ ಬಾಲಕಿಯರ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡ ಉದ್ಘಾಟನೆ ಮತ್ತು ಸಿಂಗಟಗೆರೆ ಗ್ರಾಮದ ನಾಡಕಚೇರಿಯಲ್ಲಿ ಇ ಆಫೀಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ತಾಪಂ ಇಒ ಸಿ.ಆರ್.ಪ್ರವೀಣ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.