

ನಾಪೋಕ್ಲು: ಇಲ್ಲಿನ ಹಿಂದು ಮಲಯಾಳಿ ಸಂಘದ ವತಿಯಿಂದ ಆ.17ರಂದು ಭಾನುವಾರ ಸಮೀಪದ ಹಳೇ ತಾಲೂಕಿನ ಜಿಎಂಪಿ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ ಆಯೋಜಿಸಲಾಗಿದೆ ಎಂದು ನಾಪೋಕ್ಲು ಹಿಂದು ಮಲಯಾಳಿ ಸಂಘದ ಅಧ್ಯಕ್ಷ ಕೆ.ಕೆ.ಅನಿಲ್ ಹೇಳಿದರು.
ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಹಗ್ಗಜಗ್ಗಾಟ ಸ್ಪರ್ಧೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ ಸ್ಪರ್ಧೆಗೆ ಚಾಲನೆ ನೀಡಲಾಗುವುದು. ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ನಾಪೋಕ್ಲು ಪೊಲೀಸ್ ಠಾಣೆ ಠಾಣಾಧಿಕಾರಿ ರಾಘವೇಂದ್ರ, ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಅಧ್ಯಕ್ಷ ಎ.ಕೆ.ಚಂದ್ರ, ಕಾಫಿ ಬೆಳೆಗಾರರಾದ ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ, ಚೀಯಕಪೂವಂಡ ಎಸ್. ಮಂಜುನಾಥ್ (ಕಟ್ಟಿ)ಹಾಗೂ ವಕೀಲ ಕೋಡಿಮಣಿಯಂಡ ಕುಟ್ಟಪ್ಪ ಉಪಸ್ಥಿತರಿರುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಕೆ.ಕೆ.ಅನಿಲ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಶಾಸಕ ಎ.ಎಸ್.ಪೊನ್ನಣ್ಣ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭ ಹಿಂದು ಮಲಯಾಳಿ ಸಂಘದ ಮಹಿಳಾ ಘಟಕದ ವತಿಯಿಂದ ತಿರುವಾದಿರ ನೃತ್ಯ ಪ್ರದರ್ಶನ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಂಘದ ಕಾರ್ಯದರ್ಶಿ ರಮೇಂದ್ರ ಮಾತನಾಡಿ, ಪುರುಷರಿಗಾಗಿ ಆಯೋಜಿಸಲಾಗಿರುವ ಸ್ಪರ್ಧೆಯಲ್ಲಿ ವಿಜೇತ ತಂಡಕ್ಕೆ ಮೊದಲ ಬಹುಮಾನ 33,333 ರೂ.ನಗದು, ಆಕರ್ಷಕ ಟ್ರೋಫಿ ವಿತರಿಸಲಾಗುವುದು. ದ್ವಿತೀಯ ಬಹುಮಾನ 22,222 ರೂ.ಆಕರ್ಷಕ ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ ನಗದು 11,111 ರೂ., ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು ಎಂದರು.
ಮಹಿಳೆಯರಿಗಾಗಿ ಆಯೋಜಿಸಲಾಗಿರುವ ಸ್ಪರ್ಧೆಯಲ್ಲಿ ವಿಜೇತ ತಂಡಕ್ಕೆ 11,111 ರೂ., ಆಕರ್ಷಕ ಟ್ರೋಫಿ ಮತ್ತು ಎರಡನೇ ಸ್ಥಾನ ಪಡೆದ ತಂಡಕ್ಕೆ 5,555 ರೂ., ಆಕರ್ಷಕ ಟ್ರೋಫಿ ವಿತರಿಸಲಾಗುವುದು. ಈ ಸ್ಪರ್ಧೆ ಕೊಡಗು ಜಿಲ್ಲೆಯ ಆಟಗಾರರಿಗೆ ಮಾತ್ರ ಸೀಮಿತ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಬಯಸುವ ಆಟಗಾರರು ಮೂಲ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು ಎಂದು ಸಂಘಟಕರು ತಿಳಿಸಿದ್ದಾರೆ.
ಸಂಘದ ಉಪಾಧ್ಯಕ್ಷ ಅಭಿಲಾಶ್, ಖಜಾಂಜಿ ಮಣಿ ಇದ್ದರು.