

ಉಡುಪಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಹಾಗೂ ಆಲೋಚನೆಗಳನ್ನು ಮುಕ್ತವಾಗಿ ಚರ್ಚಿಸಲು ಯುವ ಸಂಸತ್ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೇಳಿದರು.
ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಜನಪ್ರತಿನಿಧಿಗಳು ಜಿಲ್ಲೆಯ ಸಮಸ್ಯೆಗಳನ್ನು ಚರ್ಚಿಸಿ, ರ್ನಿಣಯ ಮಾಡಿ ಅಭಿವೃದ್ಧಿಪಡಿಸಲು ಹಲವು ವಿಚಾರಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಯುವಸಂಸತ್ತಿನಲ್ಲಿ ಕುಳಿತು ಮಾತನಾಡುವಾಗ ವಿದ್ಯಾರ್ಥಿಗಳಲ್ಲಿ ಸ್ಪಷ್ಟತೆ ಹಾಗೂ ತಾಳ್ಮೆ ಇರಬೇಕು ಎಂದರು. ಯುವ ಸಂಸತ್ತಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಗೆದ್ದವರು ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದು, ಅಲ್ಲಿಯೂ ವಿಜೇತರಾಗಿ ಉಡುಪಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಇಂತಹ ಕಾರ್ಯಕ್ರಮಗಳಿಂದ ಅವರ ಸಾಮಾನ್ಯ ಜ್ಞಾನ ಸುಧಾರಿಸುತ್ತದೆ. ಉತ್ತಮ ವಿಚಾರಗಳಿಂದ ಸಕಾರಾತ್ಮಕ ರ್ನಿಣಯಗಳನ್ನು ಕೈಗೊಂಡಾಗ ದೇಶದ ಪ್ರಗತಿ ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿಡಿಪಿಐ ಗಣಪತಿ ಕೆ. ಮಾತನಾಡಿ, ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ಆಶಯ ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿ ಜೀವನದಿಂದಲೇ ಅರಿವು ಮೂಡಿಸಲು ಈ ಕಾರ್ಯಕ್ರಮ ನೆರವಾಗಲಿದೆ ಎಂದರು.
ಲೀಡ್ ಬ್ಯಾಂಕ್ ಮ್ಯಾನೇಜರ್ ಪಿಂಜಾರ, ಹಣಕಾಸು ಸಲಹೆಗಾರ್ತಿ ಮೀರಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಸಾಣೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಗಣೇಶ್ ಮೊಗವೀರ ವಂದಿಸಿದರು.