ಅಭಿವೃದ್ಧಿಗೆ ಪೂರಕ ವರದಿ ಸಿದ್ಧಪಡಿಸಿ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

District Planning Committee Meeting Mandya
Published on

ಮಂಡ್ಯ: ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಚಿಂತಿಸಿ ತೊಂದರೆಯಿರುವ ಕ್ಷೇತ್ರಗಳನ್ನು ಗುರುತಿಸಿ. ಅಂತೆಯೇ ಅವುಗಳನ್ನು ಸರಿಪಡಿಸಲು ಪೂರಕವಾದ ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಡ್ಯ ನಗರಸಭೆಗೆ ಹೊಂದಿಕೊಂಡಿರುವ ಗ್ರಾಮ ಪಂಚಾಯಿತಿಗಳನ್ನು ನಗರಸಭೆ ವ್ಯಾಪ್ತಿಗೆ ತಂದು ಅಭಿವೃದ್ಧಿಪಡಿಸಬೇಕಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ನಗರ ವ್ಯಾಪ್ತಿಯಲ್ಲಿ 24*7 ಪ್ರತಿ ದಿನ ಕುಡಿಯುವ ನೀರು ಒದಗಿಸುವ ಬಗ್ಗೆ ಯೋಜನೆ ರೂಪಿಸಿ. ಇದಲ್ಲದೇ ಮಂಡ್ಯ ನಗರದ ಹೊರವಲಯದಲ್ಲಿ ರಿಂಗ್ ರೋಡ್ ರೂಪಿಸುವ ಬಗ್ಗೆ ಚಿಂತಿಸಬೇಕಿದೆ ಎಂದರು.

ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ಖಾಸಗಿ ಲೇಔಟ್‌ಗಳಿಗೆ ಅನುಮತಿ ನೀಡುವ ಮೊದಲು ನಗರ ಯೋಜನಾಧಿಕಾರಿಗಳು ರಸ್ತೆ, ಚರಂಡಿ ಇನ್ನಿತರ ಮೂಲಭೂತ ವ್ಯವಸ್ಥೆಗಳಿಗೆ ಸ್ಥಳಾವಕಾಶ ಮಾಡಿಕೊಂಡಿರುವುದನ್ನು ಪರಿಶೀಲಿಸಬೇಕು ಎಂದರು.

ಮಂಡ್ಯ ನಗರಸಭೆ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಕೆಲವು ಮುಡಾ ಲೇಔಟ್‌ಗಳನ್ನು ನಗರಸಭೆ ವ್ಯಾಪ್ತಿಗೆ ತರಬೇಕಿದೆ. ರಾಜಕಾಲುವೆಗಳನ್ನು ಉಳಿಸಿಕೊಂಡು ಅಭಿವೃದ್ಧಿಪಡಿಸಬೇಕಿದೆ. ನಗರದ ಸುಂದರೀಕರಣಕ್ಕೆ ಹೊಸ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಮಾನವ ಅಭಿವೃದ್ಧಿ ವರದಿಯನ್ನು ಅಧ್ಯಯನ ಮಾಡಿ ಸಿದ್ದಪಡಿಸಲು ಮೈಸೂರು ವಿಶ್ವವಿದ್ಯಾನಿಲಯದೊಂದಿಗೆ ಎಂ.ಒ.ಯು ಮಾಡಿಕೊಳ್ಳಬೇಕಿದೆ. ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಲು ಮುಖ್ಯವಾಗಿ ಕೃಷಿ, ಆರೋಗ್ಯ, ಶಿಕ್ಷಣ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆ ಯವರಿಗೆ ಮೂಲದಲ್ಲಿ ಇರುವ ಸಮಸ್ಯೆಗಳು ಹಾಗೂ ಅದನ್ನು ಪರಿಹರಿಸಲು ಕ್ರಮಗಳ ಕುರಿತು ವರದಿ ನೀಡುವಂತೆ ತಿಳಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net