

ವಿಜಯಪುರ: ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ನ. 15 ರಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಿ ನಂತರ ಅಂದು ಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಎಸ್ಸಿ& ಎಸ್ಟಿ ಸಮುದಾಯದವರ ಅಭಿವೃದ್ಧಿಗಾಗಿ ಹಮ್ಮಿಕೊಂಡ ವಿವಿಧ ಯೋಜನೆ&ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮ& ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಮೂರು ದಿನಗಳೊಳಗಾಗಿ ಸಲ್ಲಿಸಬೇಕು. ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಧಾನ ಮಂಡಲ ಸಮಿತಿಯು ಬೆಳಗಾವಿ ವಿಭಾಗದಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಬಾಗಲಕೋಟೆಯಲ್ಲಿ ವಿಜಯಪುರ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಲಿದೆ.
ಸಭೆಯಲ್ಲಿ ಇಲಾಖೆಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಾಮಾನ್ಯ ಕಾರ್ಯಕ್ರಮಗಳು ಮತ್ತು ಎಸ್ಸಿಪಿ& ಟಿಎಸ್ಪಿ ಯೋಜನೆಯಡಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯವರ ಕಲ್ಯಾಣ ಕಾರ್ಯಕ್ರಮಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದು, ಅಧಿಕಾರಿಗಳು ತಮ್ಮ ವ್ಯಾಪ್ತಿಯ ಯೋಜನೆ& ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಒದಗಿಸಬೇಕು. ಯಾವುದೇ ಕಾರಣಕ್ಕೂ ಲೋಪವಾಗದಂತೆ ಸಮಗ್ರ ಮಾಹಿತಿ ಒದಗಿಸಬೇಕು. ಒಂದು ವೇಳೆ ತಪ್ಪು ಮಾಹಿತಿ ಒದಗಿಸಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಜಿಪಂ ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿ.ಪಂ. ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಡಿಎಸ್ಪಿ ಸುನೀಲ ಕಾಂಬಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ಕುಮಾರ ಗುಣಾರಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ, ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಮತ್ತಿತರರಿದ್ದರು.