

ಶಿರಸಿ: ನಗರದಲ್ಲಿ ಡಿಸೆಂಬರ್ 3ಮತ್ತು 4ರಂದು ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ನಗರದ ಆಡಳಿತ ಸೌಧದಲ್ಲಿ ಶನಿವಾರ ಆಯೋಜಿಸಿದ್ದ ಕಸಾಪ ಜಿಲ್ಲಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 25ವರ್ಷಗಳ ನಂತರ ನಗರದ ನೆಮ್ಮದಿಯ ರಂಗಧಾಮದಲ್ಲಿ ಸಮ್ಮೇಳನ ನಡೆಯಲಿದ್ದು. ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಸಾಹಿತ್ಯ ಸಮ್ಮೇಳನದ ದಿನ ಮಾರಿಗುಡಿಯಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಊಟೋಪಚಾರ ವ್ಯವಸ್ಥೆ ಸೇರಿದಂತೆ ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳಬೇಕು. ಸಮ್ಮೇಳನಕ್ಕೆ ಸರ್ಕಾರದಿಂದ 3ಲಕ್ಷ ರೂ. ಅನುದಾನ ಬರಲಿದೆ. 17 ಲಕ್ಷ ರೂ. ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಕನ್ನಡ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸಮ್ಮೇಳನಾಧ್ಯಕ್ಷರ ಆಯ್ಕೆ, ಲಾಂಛನ ಬಿಡುಗಡೆ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದರು.
ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್ ವಾಸರೆ ಮಾತನಾಡಿ, ಲಾಂಛನ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಹ ಶಿರಸಿಯಲ್ಲೇ ನಡೆಯಲಿದೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಹಲವು ಸಮಿತಿಗಳನ್ನು ರಚಿಸಲಾಗುವುದು. ಶಾಸಕ ಭೀಮಣ್ಣ ನಾಯ್ಕ ಗೌರವಾಧ್ಯಕ್ಷರಾಗಿರುತ್ತಾರೆ. ವಸತಿ, ಊಟೋಪಚಾರ, ಸ್ವಾಗತ, ಮೆರವಣಿಗೆ ಸೇರಿ ಹಲವು ಉಪ ಸಮಿತಿಗಳನ್ನು ರಚಿಸಲಾಗುತ್ತದೆ ಎಂದರು.
ಕಸಾಪ ಶಿರಸಿ ಘಟಕದ ಅಧ್ಯಕ್ಷ ಜಿ. ಸುಬ್ರಾಯ ಭಟ್ ಬಕ್ಕಳ ಸ್ವಾಗತಿಸಿದರು.
ತಹಸೀಲ್ದಾರ್ ಶ್ರೀಧರ ಮಂದಲಮನಿ. ಡಿಡಿಪಿಐ ಬಸವರಾಜ, ನಗರಸಭೆ ಪೌರಾಯುಕ್ತ ಕಾಂತರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಜಿಲ್ಲಾ ಕಸಾಪ ಕಾರ್ಯದರ್ಶಿ ಪಿ. ಆರ್ ನಾಯ್ಕ, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯ್ಕ ಹಾಗೂ ಕಸಾಪ ಶಿರಸಿ ಘಟಕದ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.