ಜಿಲ್ಲೆ, ತಾಲೂಕು ಮಟ್ಟದ ಸಮಾವೇಶ ಆಯೋಜನೆ

27 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನಪರ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ. ಗ್ಯಾರಂಟಿ ಪ್ರತಿ ಅರ್ಹ ಫಲಾನುಭವಿಗೆ ಯೋಜನೆ ಲಾಭ ತಲುಪಿಸಲು ಜನರಲ್ಲಿ ಗ್ಯಾರಂಟಿಗಳ ಅರಿವು ಮೂಡಿಸುವ ಅಗತ್ಯವಿದೆ. ಹೀಗಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಸಮುದಾಯ, ವ್ಯಕ್ತಿಗಳಿಗೆ ಮುಟ್ಟಿಸಬೇಕು. ಯೋಜನೆಗಳ ಜತೆಗೆ ವಿವಿಧ ಇಲಾಖೆಗಳಿಗೆ ವಿವಿಧ ಯೋಜನೆಗಳಡಿ ಫಲಾನುಭವಿಗಳ ಸಂಖ್ಯೆ ನಿಗದಿಪಡಿಸಿ ಗುರಿ ನೀಡಲಾಗಿದೆ. ಸರ್ಕಾರದಿಂದ ಹಂತ ಹಂತವಾಗಿ ಅನುದಾನ ಬಿಡುಗಡೆಯಾಗುತ್ತಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಇಲಾಖಾ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಕ್ರಮಕೈಗೊಳ್ಳಬೇಕು ಎಂದರು.
ಜ. 31ರಂದು ಕುಂದಗೋಳ, ಫೆ. 2ರಂದು ಹುಬ್ಬಳ್ಳಿ ಮತ್ತು ಫೆ. 5ರಂದು ಧಾರವಾಡದಲ್ಲಿ ಗ್ಯಾರಂಟಿ ಸೇರಿ ವಿವಿಧ ಯೋಜನೆಗಳ ಪಲಾನುಭವಿಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ. ಆಯಾ ತಾಲೂಕಿನ ತಹಸೀಲ್ದಾರ ಮತ್ತು ಇಒ ನೇತೃತ್ವದಲ್ಲಿ ಸಮಾವೇಶದ ಸಿದ್ಧತೆ ಆರಂಭಿಸಿ, ನಿಗದಿತ ದಿನಾಂಕಗಳಂದು ಕಾರ್ಯಕ್ರಮ ಯಶಸ್ವಿಯಾಗಿ ಸಂಘಟಿಸಬೇಕು ಎಂದರು.
ಫೆಬ್ರವರಿಯಲ್ಲಿ ಎಲ್ಲ ತಾಲೂಕುಗಳಲ್ಲಿ ಫಲಾನುಭವಿಗಳ ಸಮಾವೇಶ ಮಾಡಲು ನಿರ್ಧರಿಸಲಾಗಿದೆ. ಜಿಲ್ಲಾ ಮಟ್ಟದ ಸಮಾವೇಶವನ್ನು ಮುಖ್ಯಮಂತ್ರಿ ಉದ್ಘಾಟಿಸಲಿದ್ದು, ಶೀಘ್ರ ದಿನಾಂಕ ನಿಗದಿ ಮಾಡಲಾಗುವುದು ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹ್ಮದ್ ರೋಷನ್, ಹೆಸ್ಕಾಂ ಗ್ರಾಮೀಣ ಇಇ ಎಂ.ಟಿ.ದೊಡ್ಡಮನಿ, ಎಂ.ಎಂ.ನದಾಫ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ. ಭದ್ರಣ್ಣವರ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net