ಜಿಲ್ಲಾ ಉತ್ಸವ ನಡೆಸಲು ಪ್ರಯತ್ನ - ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿಕೆ

rcr-2
ರಾಯಚೂರಿನಲ್ಲಿ 76ನೇ ಗಣರಾಜ್ಯೋತ್ಸವದ ನಿಮಿತ್ತ ವಿವಿಧ ಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.
Published on

ರಾಯಚೂರು: ಈ ಬಾರಿ ಜಿಲ್ಲಾ ಉತ್ಸವ ನಡೆಸಲು ಸರ್ಕಾರದೊಂದಿಗೆ ಚರ್ಚಿಸಲಾಗುವುದು. ಮಹಾನಗರ ಪಾಲಿಕೆಗೆ 200 ಕೋಟಿ ರೂ. ನೀಡಲು ಸಿಎಂಗೆ ಒತ್ತಾಯ ಮಾಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರಿಡಾಂಗಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾ ಉತ್ಸವಕ್ಕೆ ಸಂಬಂದಿಸಿ ಡಿಸಿಯಿಂದ ಮಾಹಿತಿ ಪಡೆದು ಆದಷ್ಟು ಬೇಗ ಆಚರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು, ಅವರ ಸಮಸ್ಯೆಗಳ ಪರಿಹಾರಕ್ಕೆ ಸದಾ ಸಿದ್ಧವಿದೆ. ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಲು ಕೂಡಲೇ ಆದೇಶ ನೀಡಲಾಗುವುದು. ಕೇಂದ್ರ ಸರ್ಕಾರದ ಅಂತಿಮ ಅಧಿಸೂಚನೆ ಅನುಸಾರ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ನಗರದ ಒಪೆಕ್ ಆಸ್ಪತ್ರೆಯನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ನಿರ್ವಹಣೆಗೆ ಸಂಬಂಧಿಸಿ ಸತ್ಯಸಾಯಿ ಫೌಂಡೇಷನ್‌ನಿಂದ ಕೋರಿಕೆ ಬಂದಿದ್ದು, ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ನಗರದ ಕೃಷಿ ವಿಜ್ಞಾನಗಳ ವಿವಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸಮಾವೇಶ ಕೇಂದ್ರ(ಕನ್ವೆನ್ಷನ್ ಸೆಂಟರ್) ಸ್ಥಾಪಿಸಲು ನಿರ್ಧರಿಸಿದ್ದು, ಇದಕ್ಕಾಗಿ ಮೂರು ಎಕರೆ ಮೀಸಲಿರಿಸಲಾಗಿದೆ. ನಗರದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ಕಾಮಗಾರಿಗಳನ್ನು ಮಾಡಲು ತೀರ್ಮಾನಿಸಲಾಗಿದೆ. ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಕ್ರೋ ಫೈನಾನ್ಸ್ ಕಂಪನಿಗಳ ಹೆಸರಿನಲ್ಲಿ ನಕಲಿ ರಿಕವರಿ ತಂಡದ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಸಾಲ ಮರುಪಾವತಿ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದರೆ ಪೊಲೀಸರಿಗೆ ದೂರು ನೀಡಬೇಕು. ಈಗಾಗಲೇ ಸಿಎಂ ಸಭೆ ನಡೆಸಿದ್ದು, ಕಠಿಣ ಕಾನೂನು ಜಾರಿಗೆ ಕ್ರಮಕೈಗೊಂಡಿದ್ದಾರೆ ಎಂದು ತಿಳಿಸಿದರು. ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಕಾಂಗ್ರೆಸ್ ಮುಖಂಡರಾದ ಕೆ.ಶಾಂತಪ್ಪ, ಬಸವರಾಜ ಪಾಟೀಲ್ ಇಟಗಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net