ಮ್ಯಾನ್ಯುಯಲ್​ ಸ್ಕ್ಯಾವೆಂಜರ್​ ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ: ಜಿಲ್ಲಾಧಿಕಾರಿ

udp-19-DC Meet
Published on

ಉಡುಪಿ: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾ​ಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನ್ಯುಯಲ್​ ಸ್ಕ್ಯಾವೆಂಜರ್​ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳೇ ಜವಾಬ್ದಾರರಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದರು.

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಮ್ಯಾನ್ಯುಯಲ್​ ಸ್ಕ್ಯಾವೆಂಜರ್​ಗಳ ಬಗ್ಗೆ ಸಮೀಕ್ಷೆ ನಡೆಸಿ, ಯಾವುದೇ ಮ್ಯಾನ್ಯುಯಲ್​ ಸ್ಕ್ಯಾವೆಂಜರ್​ ಇಲ್ಲವೆಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. ಈ ಸಮೀಕ್ಷೆ ನಂತರವು ಯಾರಾದರೂ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಹಾಗೂ ಸ್ಕ್ಯಾವೆಂಜಿಂಗ್​ ಕೆಲಸವನ್ನು ಮಾಡಿಸುವವರ ವಿರುದ್ಧ ಸಹ ಎಂ.ಎಸ್​. ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಸಕ್ಕಿಂಗ್​ ಯಂತ್ರಗಳ ಮೂಲಕವೇ ಶೌಚಗುಂಡಿಗಳನ್ನು ಸ್ವಚ್ಛಗೊಳಿಸಿ, ಅದನ್ನು ಸೂಕ್ತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ವಿಲೇವಾರಿ ಅಗತ್ಯವಿರುವ ನಿರ್ವಹಣಾ ಘಟಕಗಳ ಸ್ಥಾಪನೆಯನ್ನು ಆದ್ಯತೆಯ ಮೇಲೆ ಕೈಗೊಳ್ಳುವಂತೆ ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ ಪೌರ ಕಾರ್ಮಿಕರಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆಯನ್ನು ನಡೆಸುವಂತೆ ಮತ್ತು ಅವರಿಗೆ ಕರ್ತವ್ಯ ನಿರ್ವಹಣೆಗೆ ಅಗತ್ಯವಿರುವ ಉತ್ತಮ ಗುಣಮಟ್ಟದ ಸುರಕ್ಷತಾ ಧರಿಸು ಮತ್ತು ಪರಿಕರಗಳನ್ನು ನೀಡಿ, ಅವರು ಅವುಗಳನ್ನು ಧರಿಸಿಕೊಂಡೇ ಕರ್ತವ್ಯ ನಿರ್ವಹಿಸುವ ಬಗ್ಗೆ ಪರಿಶೀಲನೆ ನಡೆಸಿ ಎಂದರು.

ಜಿಪಂ​ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಎಲ್ಲಾ ಗ್ರಾಪಂ​ಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಯೋಜನೆಗಳ ಸೌಲಭ್ಯವನ್ನು ಒದಗಿಸುವಂತೆ ಮತ್ತು ಜಿಲ್ಲಾ ಪಂಚಾಯತ್​ ವತಿಯಿಂದ ಜಿಲ್ಲೆಯ ವಿವಿಧೆಡೆ ಆರಂಭಿಸಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕಗಳ ಸೌಲಭ್ಯವನ್ನು ಬಳಸಿಕೊಂಡು ಸಕ್ಕಿಂಗ್​ ಯಂತ್ರಗಳ ಮೂಲಕ ಸಂಗ್ರಹಿಸುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಕ್ಷಯ್​ ಎಂ ಹಾಕೆ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್​., ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net