ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆ

DC Meet 1
Published on

ಉಡುಪಿ: ಜಿಲ್ಲೆಗೆ ಉದ್ಯೋಗ ಅರಸಿ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಯದಂತೆ ಎಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆ ಹಾಗೂ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಗತ್ಯ ಸೌಲಭ್ಯ ನೀಡಿ
ಸಾಮಾನ್ಯವಾಗಿ ಹೊರ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾರ್ಮಿಕರು ಉದ್ಯೋಗ ಅರಸಿ ಉಡುಪಿ ಜಿಲ್ಲೆಗೆ ಬರುತ್ತಿದ್ದಾರೆ. ಅವರಿಗೆ ಉದ್ಯೋಗ ನೀಡುವ ಗುತ್ತಿಗೆದಾರರು, ಮಾಲೀಕರು, ಕಾರ್ಮಿಕ ಕಾಯ್ದೆಯಡಿ ಘೋಷಿಸಿರುವ ಕನಿಷ್ಠ ವೇತನ, ಭವಿಷ್ಯ ನಿಧಿ, ಇಎಸ್​ಐ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಬೇಕು. ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಕರೆದೊಯ್ಯುವಾಗ ಗೂಡ್ಸ್​ ವಾಹನ ಬಳಸಬಾರದು. ಅವರು ಇರುವ ಸ್ಥಳದಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನೂ ಕಲ್ಪಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ 9 ದೌರ್ಜನ್ಯ ಪ್ರಕರಣ
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 9 ದೌರ್ಜನ್ಯ ಪ್ರಕರಣಗಳಾಗಿದ್ದು, ಈಗಾಗಲೇ 2 ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. 5 ಪ್ರಕರಣಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಜಾರಿಯಲ್ಲಿದ್ದು, 1 ಪ್ರಕರಣದಲ್ಲಿ ಬಿ ರಿಪೋರ್ಟ್​ ಹಾಗೂ ಇನ್ನೊಂದು ಪ್ರಕರಣದಲ್ಲಿ ಎಸ್​ಸಿ/ಎಸ್​ಟಿ ಕಾಯ್ದೆಯಡಿ ಕೈಬಿಡಲಾಗಿದೆ. ಕಾರ್ಮಿಕರ ಆರೋಗ್ಯ ಕಾಪಾಡುವಲ್ಲಿ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ಜನಸಾಮಾನ್ಯರು ದೌರ್ಜನ್ಯ ಪ್ರಕರಣ ನಡೆಸದಂತೆ ಅರಿವು ಮೂಡಿಸಬೇಕು. ದೌರ್ಜನ್ಯ ಎಸಗಿದರೆ ಕಾನೂನಿನ ಅಡಿಯಲ್ಲಿ ಏನೆಲ್ಲ ಕ್ರಮ ಕೈಗೊಳ್ಳಲಾಗುತ್ತವೆ ಎಂಬುದನ್ನೂ ಸಹ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ವಿದ್ಯಾಕುಮಾರಿ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್​ ಕೆ., ಸರ್ಕಾರಿ ಅಭಿಯೋಜಕ ಜಯರಾಮ್​ ಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲ ನಗರ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು, ತಾಪಂ ಇಒ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ವಾಸುದೇವ ಎಚ್​.ಎಸ್​., ಉದಯ ಪಂಬದ, ಗೌರಿ ಕೆಂಜೂರು, ಬಾಲಗಂಗಾಧರ ಬಿ. ಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net