

ಕುಶಾಲನಗರ: ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ವಿಷಯದಡಿ ಸೆ.27 ರಂದು ಬೆಳಗ್ಗೆ 10.30ಕ್ಕೆ ಮೈಸೂರು ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ಆಯೋಜಿಸಿರುವ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆ ಸೇರಿದಂತೆ ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿವೆ ಎಂದು ಡಯಟ್ ಪ್ರಾಂಶುಪಾಲ ಎಂ.ಚಂದ್ರಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಭಾಗ ಮಟ್ಟದ ನಾಟಕ ಸ್ಪರ್ಧೆಯಲ್ಲಿ ವಿಜೇತರಾಗುವ ಮೊದಲ ಮೂರು ತಂಡಗಳಿಗೆ ಕ್ರಮವಾಗಿ 4 ಸಾವಿರ ರೂ. , 3200 ರೂ. ಹಾಗೂ 2400 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಅದ್ಭುತ ಆಹಾರವಾಗಿ ಸಿರಿಧಾನ್ಯಗಳು, ಆಹಾರ ಭದ್ರತೆ, ನಿತ್ಯ ಜೀವನದಲ್ಲಿ ಆಧುನಿಕ ತಂತ್ರಜ್ಞಾನ, ಆರೋಗ್ಯ ರಕ್ಷಣೆಯಲ್ಲಿ ಪ್ರಸ್ತುತ ಪ್ರಗತಿಗಳು, ಸಮಾಜದಲ್ಲಿನ ಮೂಢನಂಬಿಕೆಗಳು ವಿಷಯಗಳ ಕುರಿತು ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಲಿದ್ದಾರೆ ಎಂದು ತಿಳಿಸಿದ್ದಾರೆ.