

ಕೊಪ್ಪಳ: ಆರೋಗ್ಯ ಸ್ಥಿರತೆ, ಮಾನಸಿಕ ಮತ್ತು ದೈಹಕ ಸದೃಢತೆಗೆ ಕ್ರೀಡೆ ಅವಶ್ಯ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡಾ ಹವ್ಯಾಸ ಬೆಳೆಸಿಕೊಳ್ಳಿ. ಪಾಲಕರು, ಶಿಕ್ಷಕರು ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಿ. ಕ್ರೀಡೆಯಲ್ಲಿ ಸೋಲು - ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಕಲ್ಯಾಣ ಕರ್ನಾಟಕ ಕೀರ್ತಿ ಹೆಚ್ಚಿಸಿ ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಮಾತನಾಡಿ, ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಕಲಬುರಗಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಂಘಟಿಸಲಾಗಿದೆ.
ನಮ್ಮ ಜಿಲ್ಲೆಯಲ್ಲಿ ಖೋಖೋ, ಬಾಲ್ ಬ್ಯಾಡ್ಮಿಂಟನ್ ಹಾಗೂ ಹ್ಯಾಂಡಬಾಲ್ ಸ್ಪರ್ಧೆಗಳು ನಡೆಯುತ್ತಿವೆ ಎಂದರು. ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ಹ್ಯಾಂಡಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಶ್ರೀಕಾಂತ,
ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎ.ಬಸವರಾಜ, ತಾಲೂಕು ಕ್ರೀಡಾಧಿಕಾರಿ ಶರಣಬಸವ ಬಂಡಿಹಾಳ, ತಾಲೂಕು ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿರುಪಾಕ್ಷಪ್ಪ ಬಾಗೋಡಿ ಇತರರಿದ್ದರು.