

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಭವನ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಲೋಕಾರ್ಪಣೆ ಮಾಡಿದರು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ.ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮೊದಲಾದವರಿದ್ದರು.
ನಿರ್ಲಕ್ಷ್ಯ ಆರೋಪ: ಉದ್ಘಾಟನಾ ಕಾರ್ಯಕ್ರಮದಲ್ಲಿ ದಲಿತ ಸಂಘಟನೆಗಳ ಪ್ರಮುಖರನ್ನು ನಿರ್ಲಕ್ಷಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಭವನ ಉದ್ಘಾಟಿಸಿದ ಸಿಎಂ ಎರಡು ನಿಮಿಷ ಮಾತನಾಡುವ ಸೌಜನ್ಯ ತೋರಿಸಿಲ್ಲ. ಭವನ ನಿರ್ಮಾಣವಾಗಿ ಒಂದೂವರೆ ವರ್ಷದ ಬಳಿಕ ಉದ್ಘಾಟನೆ ನಡೆಯುತ್ತಿದೆ. ಈ ವೇಳೆ ಸಂಘಟನೆ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಆದರೆ ದೂರವಿಟ್ಟು ಸಭಾಂಗಣ ಉದ್ಘಾಟಿಸಲಾಗಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರೂ ಸಿಎಂಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿಲ್ಲ ಎಂದು ದಿಕ್ಕಾರ ಕೂಗಿದರು.