

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಮಿಕರ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಿಂದ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿ, ಅಂಗಡಿ, ವಾಣಿಜ್ಯ ಉದ್ದಿಮೆಗಳು, ಗ್ಯಾರೇಜ್‌ಗಳು, ಕಾಫಿ ಪ್ಲಾಂಟೇಷನ್, ಹೋಟೆಲ್ ಮತ್ತಿತರ ಪ್ರದೇಶಗಳಲ್ಲಿ ಬಾಲಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆಗಳನ್ನು ಕೈಗೊಂಡು ಕ್ರಮಕೈಗೊಳ್ಳಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಅಂಗಡಿ, ವಾಣಿಜ್ಯ ಸಂಸ್ಥೆಗಳಿಗೆ ಪರವಾನಗಿ ಕೊಡುವ ಸಮಯದಲ್ಲಿ ಮಾಲೀಕರಿಗೆ ತಿಳಿವಳಿಕೆ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಇದುವರಿಗೆ 2176 ತಪಾಸಣೆಗಳನ್ನು ಮಾಡಿ 23 ಪ್ರಕರಣಗಳನ್ನು ದಾಖಲು ಮಾಡಿ ಅದರಲ್ಲಿ 22 ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. 10 ಪ್ರಕರಣಗಳಲ್ಲಿ ದಂಡ ಹಾಕಲಾಗಿದೆ ಎಂದು ಮಾಹಿತಿ ನೀಡಿದರು.
ಜೂ.12ರಂದು ಬಾಲಕಾರ್ಮಿಕರ ನಿರ್ಮೂಲನ ದಿನವನ್ನು ಅರ್ಥಪೂರ್ಣವಾಗಿ ವಿವಿಧ ಇಲಾಖೆಗಳು ಸೇರಿ ಆಚರಿಸಲು ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹನುಮಂತಪ್ಪ, ಎಸ್ಪಿ ಡಾ. ವಿಕ್ರಮ ಅಮಟೆ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಎಲ್.ರವಿಕುಮಾರ್, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಇದ್ದರು.