

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಮಾಜದಲ್ಲಿ ಮೂಢನಂಬಿಕೆ ಮತ್ತು ಮೌಢ್ಯತೆಯ ತಪ್ಪು ಕಲ್ಪನೆಗಳಿಂದ ಹೆಣ್ಣು ಮಗುವಿನ ಮೇಲೆ ತಾತ್ಸಾರ ಮತ್ತು ತಿರಸ್ಕಾರದ ಭಾವನೆ ಬೇಡ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಜಿಲ್ಲೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆ 1994ರ ಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ಪ್ರಕರಣಗಳ ವಿರುದ್ಧ ಧ್ವನಿ ಎತ್ತಬೇಕು ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಮಾತನಾಡಿ, ಇಂದಿನ ಸಮಾಜದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಹೆಚ್ಚುತ್ತಿದೆ. ಭ್ರೂಣ ಹತ್ಯೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಭ್ರೂಣ ಹತ್ಯೆ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಿಪಂ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ ಮಾತನಾಡಿ, ಶಿಕ್ಷಣದಿಂದ ಬದಲಾವಣೆ ಕಾಣಬಹುದು. ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಮ್ಮ ಮನೆಯಿಂದಲೇ ಆರಂಭಿಸಬೇಕು. ಭ್ರೂಣ ಹತ್ಯೆ ತಡೆಗಟ್ಟಲು ಸಮಾಜದಲ್ಲಿ ಉತ್ತಮ ಸಂದೇಶ ಬಿತ್ತರಿಸುವ ಕೆಲಸವಾಗಬೇಕು ಎಂದರು.
ಡಾ.ಯೋಗೇಂದ್ರ ಕಬಾಡಿ ಮಾತನಾಡಿದರು. ಜಿಲ್ಲಾ ನೋಡಲ್ ಅಧಿಕಾರಿ ಡಾ. ಮಹೇಶ ಚಿತ್ತರಗಿ, ಪೊಲೀಸ್ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲೆಯ ಖಾಸಗಿ ಮತ್ತು ಸರ್ಕಾರಿ ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ, ಮೇಲ್ವಿಚಾರಕರು, ಇತರರು ಇದ್ದರು.
ಡಾ. ಎಚ್.ಎಚ್. ಕುಕನೂರು ಸ್ವಾಗತಿಸಿದರು. ಸುಜಾತಾ ಮುರಾರಿ ನಿರೂಪಿಸಿದರು. ಡಾ. ಕಮಲಾ ಬೈಲೂರ ವಂದಿಸಿದರು.