

ಗುಂಡ್ಲುಪೇಟೆ: ಹದಿನೆಂಟು ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಬಾಲ್ಯದಲ್ಲಿಯೇ ದುಡಿಮೆಯಲ್ಲಿ ತೊಡಗುವ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುವುದರಿಂದ ಭವಿಷ್ಯದಲ್ಲಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯವಿಲ್ಲ ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ತಳವಾರ್ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಡತನ ಅಥವಾ ಅಸಹಾಯಕತೆಯಿಂದ ಶಾಲೆ ತೊರೆದ ಮಕ್ಕಳು ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಮನೆಗೆ ಸಹಾಯ ಮಾಡಲು ದುಡಿಯುವ ಮಕ್ಕಳು ಉತ್ತಮ ಶಿಕ್ಷಣದಿಂದ ವಂಚಿತರಾಗುತ್ತಾರೆ. ಅಲ್ಲದೆ ಇಂತಹವರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕೆಟ್ಟು ದೇಶಕ್ಕೆ ಉತ್ತಮ ಪ್ರಜೆಗಳಾಗಲು ಸಾಧ್ಯವಾಗದಂತಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಬಾಲ್ಯದಲ್ಲಿಯೇ ತಪ್ಪು ಸಹವಾಸದಿಂದ ಮಕ್ಕಳು ಸಮಾಜಘಾತಕರಾಗುವ ಅಪಾಯವಿದೆ. ಇಂತಹ ಮಾರಕ, ಅನಿಷ್ಟದಿಂದ ಪಾರುಮಾಡಲು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಸಹಾಯವಾಣಿ ನೆರವಾಗಲಿದೆ. ಸರ್ಕಾರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ರೂಪಿಸಿದ್ದು, ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳುವವರಿಗೆ ದಂಡ ಹಾಗೂ ಶಿಕ್ಷೆ ವಿಧಿಸಲಾಗುತ್ತದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನಾಗಿಸಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ವಿದ್ಯಾರ್ಥಿಗಳು ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಟಿ.ದೀಪು, ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಬಿ.ಗಿರೀಶ್, ಕಾರ್ಮಿಕ ನಿರೀಕ್ಷಕ ನಾರಾಯಣಮೂರ್ತಿ, ಬಾಲನ್ಯಾಯ ಮಂಡಳಿ ಸದಸ್ಯೆ ಸರಸ್ವತಿ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ರಮೇಶ್, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ, ಸಹಾಯಕ ಸರ್ಕಾರಿ ಅಭಿಯೋಜಕರಾದ ರೇವಣ್ಣ, ಪ್ರಸನ್ನಕುಮಾರ್ ಇತರರು ಇದ್ದರು.