ಸಮಸ್ಯೆಗಳಿಗೆ ರೈತರು ಎದೆಗುಂದದಿರಲಿ

10-RNR-06
Published on

ರಾಣೆಬೆನ್ನೂರ: ರೈತರು ಅಕಾಲಿಕ ಮಳೆ ಸೇರಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ವಣವಾಗಿದೆ. ಆದರೆ, ಯಾವುದೇ ಕಾರಣಕ್ಕೂ ಎಂದೆಗುಂದಬಾರದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಇಲ್ಲಿನ ಚಿದಂಬರ ನಗರದಲ್ಲಿ ಕೃಷಿ ಇಲಾಖೆ ಉಪ ನಿರ್ದೇಶಕರ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ರೈತರಿಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಿದೆ. ಇದರಿಂದ ನೊಂದು ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಸರ್ಕಾರ ಸದಾ ನಿಮ್ಮೊಂದಿಗೆ ಇದೆ. ಅಕಾಲಿಕ ಮಳೆಯಿಂದ ಹಾನಿಯಾದ ಬಗ್ಗೆ ಅಧಿಕಾರಿಗಳು ಸರ್ವೆ ನಡೆಸುತ್ತಿದ್ದಾರೆ. ಸರ್ಕಾರಕ್ಕೆ ಮಾಹಿತಿ ನೀಡಲು ಈಗಾಗಲೇ ಅವರಿಗೆ ಸೂಚಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣೆ ಅಡಿ ಪರಿಹಾರ ನೀಡಲಾಗುವುದು. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ. ಹೊಲಕ್ಕೆ ಕೃಷಿ ಅಧಿಕಾರಿಗಳ ತಂಡ ಭೇಟಿ ನೀಡಿ ರೈತರಿಗೆ ಸಲಹೆ-ಸೂಚನೆ ನೀಡಲಿದೆ. ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಪಂ ಅಧ್ಯಕ್ಷ ಏಕನಾಥ ಬಾನುವಳ್ಳಿ ಮಾತನಾಡಿ, ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸಲು ಕೃಷಿ ಸಚಿವರು ಮುಂದಾಗಬೇಕು ಎಂದರು.

ಶಾಸಕರಾದ ಅರುಣಕುಮಾರ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ, ಜಿಪಂ ಸದಸ್ಯರಾದ ಶಿವಾನಂದಪ್ಪ ಕನ್ನಪ್ಪಳವರ, ಮಂಗಳಗೌರಿ ಪೂಜಾರ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚೋಳಪ್ಪ ಕಸವಾಳ, ತಾಪಂ ಅಧ್ಯಕ್ಷೆ ಗೀತಾ ಲಮಾಣಿ, ಉಪಾಧ್ಯಕ್ಷೆ ಕಸ್ತೂರೆವ್ವ ಹೊನ್ನಾಳಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಎಸ್. ರಾಮಲಿಂಗಣ್ಣನವರ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ, ಕೃಷಿ ಸಹಾಯಕ ನಿರ್ದೇಶಕ ಎಚ್.ಬಿ. ಗೌಡಪ್ಪಳವರ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net