

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಆರೋಗ್ಯದಲ್ಲಿ ಇಂದು ಏರುಪೇರು ಆಗಿತ್ತು. ಹಾಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆರೋಗ್ಯ ತಪಾಸಣೆ ಮಾಡಿ, ಚಿಕಿತ್ಸೆ ನೀಡಿದ ವೈದ್ಯರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪವಿತ್ರಾ ಗೌಡ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಲು ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.
‘ಪ್ರತಿದಿನ ಚೆಕಪ್ಗೆ ಹೋಗುತ್ತೇವೆ. ಪವಿತ್ರಾ ಗೌಡ ಬೆಳಗ್ಗೆಯಿಂದ ಆಹಾರ ಸೇವಿಸಿಲ್ಲ. ಹಾಗಾಗಿ, ಗ್ಲೂಕೋಸ್ ಲೆವೆಲ್ ಕಡಿಮೆ ಇತ್ತು. ಐವಿ ಫ್ಯೂಯಿಡ್ ಹಾಕಿದ್ದೇವೆ. ಸ್ವಲ್ಪ ಗ್ಯಾಸ್ಟ್ರೈಟಿಸ್ ಇತ್ತು. ಅದನ್ನು ಹೊರತು ಪಡಿಸಿದರೆ ಅವರು ಚೆನ್ನಾಗಿದ್ದಾರೆ. ಸ್ವಲ್ಪ ಲೋ ಬಿಪಿ ಆಗಿತ್ತು. ಎಲ್ಲ ಆರೋಪಿಗಳ ಆರೋಗ್ಯ ಚೆನ್ನಾಗಿದೆ. ಏನೂ ತೊಂದರೆ ಇಲ್ಲ’ ಎಂದು ವೈದ್ಯರು ಹೇಳಿದ್ದಾರೆ.
ಏನಿದು ಪ್ರಕರಣ?: ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್ಗೆ ತಿಳಿದಿದೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.
ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ. ಈ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.