

ಹೊಳೆನರಸೀಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕರೊನಾ ಸೋಂಕಿತ ವೈದ್ಯರೊಬ್ಬರು ಮತ್ತು ಮೂವರು ದಾದಿಯರಿಗೆ ಚಿಕಿತ್ಸೆ ನೀಡುತ್ತಿರುವ ಸ್ಪಷ್ಟ ಮಾಹಿತಿ ಲಭ್ಯವಾಗಿದ್ದು, ಇದರ ಬಗ್ಗೆ ಗೌಪ್ಯತೆ ಕಾಪಾಡುತ್ತಿರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದೆ.
ಕಳೆದ ನಾಲ್ಕು ದಿನಗಳಿಂದ 33 ಜನರಿಗೆ ಕರೊನಾ ಸೋಂಕು ದೃಢಪಟ್ಟಿರುವುದು ಜನರಿಗೆ ಆತಂಕ ಮೂಡಿಸಿದೆ. ಜತೆಯಲ್ಲಿ ಸರ್ಕಾರಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡದೆ ಸೋಂಕಿತ ವೈದ್ಯರು ಮತ್ತು ಸಿಬ್ಬಂದಿಗೆ ಮತ್ತು ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿಯ ತೀವ್ರತೆಯ ಬಗ್ಗೆ ಅರಿವಿಲ್ಲದವರಂತೆ ಆಸ್ಪತ್ರೆಯ ಆಡಳಿತ ಮಂಡಳಿಯವರು ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ ಮಾತನಾಡಿ, ಜಿಲ್ಲಾ ಆರೋಗ್ಯಾಧಿಕಾರಿ ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯಾಗಿ ಪರಿವರ್ತಿಸಿ, ಸೋಂಕಿತರಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿಸಲು ಸೂಚಿಸಿದ್ದಾರೆ ಎಂದರು.
ವೈದ್ಯ ಮತ್ತು ದಾದಿಯರಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿಯವರನ್ನು ಪ್ರಶ್ನಿಸಿದಾಗ ಇದರ ಬಗ್ಗೆ ಮಾಹಿತಿ ಇಲ್ಲ. ಪರಿಶೀಲಿಸಿ, ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದರು.