

ಬೆಂಗಳೂರು: ( doddaballapur accident ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗೌರಿಬಿದನೂರು ರಾಜ್ಯ ಹೆದ್ದಾರಿಯ ನಾಯಕರಂಡನಹಳ್ಳಿ ಸಮೀಪ ಮಂಗಳವಾರ ಬೆಳಿಗ್ಗೆ ನಡೆದ ಇನೋವಾ ಕಾರು ಅಪಘಾತದಲ್ಲಿ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ( ೭೫) ಪುರುಷೋತ್ತಮ(75), ಕಾಳಪ್ಪ(65), ನಾರಾಯಣಪ್ಪ(70) ಎಂದು ಗುರುತಿಸಲಾಗಿದೆ. 8 ಜನರು ಇನೋವಾ ಕಾರಿನಲ್ಲಿ ನಗರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೋಗುವಾಗ ಅಪಘಾತ ನಡೆದಿದೆ.
ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟದ ದೇವಸ್ಥಾನಕ್ಕೆ ತೆರಳುತ್ತಿದ್ದವರು ಸಾವಿಗೀಡಾಗಿದ್ದಾರೆ. ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು. ಕೆಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದ ಇನ್ನೂ ಮೂರು ಜನರ ಸ್ಥಿತಿ ಗಂಭೀರವಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ಪ್ರಯಾಣಿಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.