

ಹುಬ್ಬಳ್ಳಿ : ರಕ್ತದ ಕೊರತೆಯಿಂದ ತುರ್ತು ಸಂದರ್ಭಗಳಲ್ಲಿ ಅನೇಕರು ಸಾವಿಗೀಡಾಗುತ್ತಾರೆ. ಪ್ರತಿಯೊಬ್ಬರೂ ರಕ್ತದಾನದ ಮಹತ್ವ ಅರಿತು ಸ್ವಯಂ ಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಕೆಎಂಸಿಆರ್ಐ ನಿರ್ದೇಶಕ ಡಾ. ಈಶ್ವರ ಹೊಸಮನಿ ಹೇಳಿದರು.
ಸ್ವಾತಂತ್ರ್ಯ ದಿನದ ಅಂಗವಾಗಿ ರಾಷ್ಟ್ರೆೊತ್ಥಾನ ರಕ್ತ ಕೇಂದ್ರದ ಸಹಯೋಗದಲ್ಲಿ ಮತ್ತು ರೋಟರಿ ಕ್ಲಬ್ ಹುಬ್ಬಳ್ಳಿ ಮಿಡ್ ಟೌನ್ ಸಹಭಾಗಿತ್ವದಲ್ಲಿ ಇಲ್ಲಿನ ಬಾಲಾಜಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ 13ನೇ ಬಾರಿಯ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ವೈದ್ಯಕೀಯ ಲೋಕದಲ್ಲಿ ಹೊಸ ಆವಿಷ್ಕಾರ, ತಂತ್ರಜ್ಞಾನಗಳು ಮುಂದುವರೆದಿದ್ದರೂ ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಾಗಿಲ್ಲ. ಹೀಗಾಗಿ, ರಕ್ತವನ್ನು ಒಬ್ಬರಿಂದ ಮತ್ತೊಬ್ಬರಿಗೆ ವರ್ಗಾವಣೆ ಮಾಡಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಾಲಾಜಿ ಆಸ್ಪತ್ರೆ ಚೇರ್ಮನ್ ಡಾ. ಕ್ರಾಂತಿಕಿರಣ ಮಾತನಾಡಿ, ರಕ್ತದಾನದಿಂದ ಮನುಷ್ಯನಿಗೆ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದರು.
ರಾಷ್ಟ್ರೆೊತ್ಥಾನ ರಕ್ತ ಕೇಂದ್ರದ ದತ್ತಮೂರ್ತಿ ಕುಲಕರ್ಣಿ ಮಾತನಾಡಿ, ಮನುಷ್ಯನ ವಯಸ್ಸು ರಕ್ತದ ಶುದ್ಧತೆಯ ಮಾನದಂಡವಾಗಿದೆ ಎಂದರು.
ರೋಟರಿ ಕ್ಲಬ್ ಹುಬ್ಬಳ್ಳಿ ಮಿಡ್ಟೌನ್ ಮಾಜಿ ಅಧ್ಯಕ್ಷ ದಿನೇಶ ಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ ಅಂಗಡಿಕಿ, ಕನಕದಾಸ ಕಾಲೇಜಿನ ಪ್ರಾಚಾರ್ಯ ಸಂದೀಪ ಬೂದಿಹಾಳ, ಬಾಲಾಜಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಹಾಗೂ ಇತರರು ಇದ್ದರು.