

ಬಳ್ಳಾರಿ : ಮನುಷ್ಯ ಮರಣದ ನಂತರ ದೇಹವನ್ನು ಮಣ್ಣಲ್ಲಿ ಮಣ್ಣಾಗಿಸದೆ, ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಕಾಪಾಡುವ ಸಾರ್ಥಕತೆಗಾಗಿ ಪ್ರತಿಯೊಬ್ಬರು ಸ್ವಯಂ-ಪ್ರೇರಿತರಾಗಿ ನೋಂದಣಿ ಮಾಡಿಕೊಳ್ಳಲು ಮುಂದೆ ಬರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶಬಾಬು ಹೇಳಿದರು.
ತಾಲೂಕಿನ ಮೋಕಾ ಗ್ರಾಮದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂತ್ಯೋದಯ ಮಾದರಿಯಲ್ಲಿ ಆರೋಗ್ಯ ಸೇವೆಗಳನ್ನು ಜನತೆಗೆ ತಲುಪಿಸುವ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು, ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ, ಎಪಿಎಲ್ ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯನ್ನು ಸುಸಜ್ಜಿತ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಮೂಲಕ ಕಡುಬಡವರಿಗೂ ಗುಣಮಟ್ಟದ ಆರೋಗ್ಯ ಸೇವೆಯ ಸೌಲಭ್ಯ ಪಡೆದುಕೊಳ್ಳಬೇಕು. ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕ್ಷಯರೋಗ ಪರೀಕ್ಷೆ, ರಕ್ತದಾನ ಶಿಬಿರಗಳಲ್ಲಿ ಭಾಗಿಯಾಗಿ ಜನತೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮೋಕಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಿರಿಯಾಳು ಫಕೀರಮ್ಮ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ವೈದ್ಯಾಧಿಕಾರಿ ಡಾ.ಭಾರತಿ, ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ, ಉಪಾಧ್ಯಕ್ಷೆ ನಾಗವೇಣಿ, ಪಿಡಿಒ ಕಾಂತರಾಜ್, ಚಂದ್ರಕಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಾಕುಮಾರಿ, ತಜ್ಞ ವೈದ್ಯರಾದ ಡಾ.ಜುಬೇರ್, ಡಾ.ಸುಧಾಕರ್, ಡಾ.ಶ್ರೀನಾಥ, ಡಾ.ನಿತೀಶ್ ಕುಮಾರ್, ಡಾ.ಸಂಜೀವ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡಾ.ಜಬೀನಾ ತಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷೀದಾ ಬೇಗಂ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಕಚೇರಿ ಅಧೀಕ್ಷಕ ಸಂತೋಷ್ ಸುತ್ತಮುತ್ತಿನ ಗ್ರಾಮಗಳ ಸಾರ್ವಜನಿಕರು, ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.