ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಲೋಪದೋಷಕ್ಕೆ ಅವಕಾಶ ನೀಡಬೇಡಿ: ಶಿಕ್ಷಕರಿಗೆ ಡಿಸಿ ಸೂಚನೆ

Published on

ಮೈಸೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭವಾಗುತ್ತಿದ್ದು, ಇದು ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಅಧಿಕಾರಿಗಳು, ಮುಖ್ಯಶಿಕ್ಷಕರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ಸಂಬಂಧ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಯಾವುದೇ ರೀತಿಯಿಂದ ಲೋಪದೋಷ ಆಗದಂತೆ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ವ್ಯಾಪ್ತಿಯ 133 ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ಪರೀಕ್ಷಾ ಕೇಂದ್ರದ 200 ಮೀ. ಸುತ್ತ ಸಾರ್ವಜನಿಕರು ಮತ್ತು ಪಾಲಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ಕೂಡ ತೆರೆಯುವಂತಿಲ್ಲ ಎಂದರು.

ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಬಾರಿ ಕಟ್ಟನಿಟ್ಟಾಗಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯ 133 ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲೆಯ 19,114 ಬಾಲಕರು ಹಾಗೂ 18,790 ಬಾಲಕಿಯರು ಸೇರಿದಂತೆ ಒಟ್ಟು 37,904 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ವಿವರಿಸಿದರು.

ಸರ್ಕಾರ ನೀಡುವ ಎಲ್ಲ ಆದೇಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರೀಕ್ಷೆ ಸುವ್ಯವಸ್ಥೆ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಪರೀಕ್ಷಾ ಕೇಂದ್ರಗಳು

ಎಚ್.ಡಿ.ಕೋಟೆ 12, ಹುಣಸೂರು 15, ಕೆ.ಆರ್.ನಗರ 11, ಮೈಸೂರು ಉತ್ತರ 19, ಮೈಸೂರು ದಕ್ಷಿಣ 15, ಮೈಸೂರು ಗ್ರಾಮಾಂತರ 18, ನಂಜನಗೂಡು 18, ಪಿರಿಯಾಪಟ್ಟಣ 12, ತಿ.ನರಸೀಪುರ 13 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 133 ಪರೀಕ್ಷಾ ಕೇಂದ್ರಗಳಿವೆ.

ಯಶಸ್ವಿಯಾಗಿ ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮುಖ್ಯ ಅಧೀಕ್ಷಕರು 133, ಉಪಮುಖ್ಯ ಅಧೀಕ್ಷಕರು 24, ಮಾರ್ಗಾಧಿಕಾರಿಗಳು 54, ಸ್ಥಾನಿಕ ಜಾಗೃತ ದಳದ ಕಾರ್ಯಕ್ಕೆ ಅಧಿಕಾರಿಗಳು 133, ಮೊಬೈಲ್ ಫೋನ್ ಸ್ವಾಧಿನಾಧಿಕಾರಿಗಳು 133, ತಾಲೂಕು ಹಂತದ ಜಾಗೃತಿ ದಳ 03 ಹಾಗೂ ಜಿಲ್ಲಾ ಹಂತದ ಜಾಗೃತ ದಳ 03 ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ:

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅಭ್ಯರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಅಗತ್ಯ ಆಸನದ ವ್ಯವಸ್ಥೆ ಮಾಡಲಾಗಿದ್ದು, ಕುಡಿಯುವ ನೀರು, ಶೌಚಗೃಹ ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಪ್ರಶ್ನಾಪತ್ರಿಕೆ ಪಾಲಕರನ್ನು ಆಯೋಜಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net