ಆಂಗ್ಲ ಭಾಷೆಯ ವ್ಯಾಮೋಹ ಬೇಡ

1blrp1
ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಯ ಕರ್ನಾಟಕ ಸಂಘಟನೆ ಆಟೋ ಘಟಕದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಘಟನೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳು
Published on

ಬೇಲೂರು: ಕಲೆ, ಸಾಹಿತ್ಯ, ಸಂಗೀತ ಹಾಗೂ ಸಂಸ್ಕೃತಿಯ ತವರೂರಾದ ಕನ್ನಡ ನಾಡಿನಲ್ಲಿ ಕನ್ನಡ ಭಾಷೆ ಮತ್ತು ನಾಡನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಎಂ.ರಾಜು ಹೇಳಿದರು.

ಪಟ್ಟಣದ ಜೂನಿಯರ್ ಕಾಲೇಜು ಮುಂಭಾಗದ ಜಯ ಕರ್ನಾಟಕ ಸಂಘಟನೆ ಆಟೋ ಘಟಕದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಅತ್ಯಂತ ಶ್ರೀಮಂತ ಭಾಷೆ. ಕನ್ನಡದ ಪ್ರಥಮ ಶಿಲಾಶಾಸನ ನಮ್ಮ ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಸಿಕ್ಕಿರುವುದು ಕನ್ನಡಿಗರಾದ ನಮಗೆ ಹೆಮ್ಮೆಯ ಸಂಗತಿ. ಇಂದು ಆಂಗ್ಲ ಭಾಷೆಯ ವ್ಯಾಮೋಹಕ್ಕೊಳಗಾಗಿ ರಾಜ್ಯೋತ್ಸವದಂದು ಮಾತ್ರ ಕನ್ನಡ ಉಳಿಸಿ ಎನ್ನುವುದನ್ನು ಬಿಟ್ಟು, ನಿತ್ಯವೂ ಕನ್ನಡ, ಎಂದೆಂದಿಗೂ ಕನ್ನಡ ಎನ್ನುವಂತೆ ಕನ್ನಡಿಗರಲ್ಲಿ ಅರಿವು ಮೂಡಿಸಬೇಕು ಎಂದರು.

ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಎಂ.ಕೆ.ಆರ್.ಸೋಮೇಶ್ ಮಾತನಾಡಿ, ಕೇಂದ್ರ ಸರ್ಕಾರ ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಸರಿಯಲ್ಲ. ಹಿಂದಿ ಕಡ್ಡಾಯವಾಗಿ ಹೇರಲು ಬಂದರೆ ಉಗ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಯ ಕರ್ನಾಟಕ ಸಂಘಟನೆ ತಾಲೂಕು ಕಾರ್ಯಾಧ್ಯಕ್ಷ ಲಕ್ಷ್ಮಣ್, ಗೌರವಾಧ್ಯಕ್ಷ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಹೇಮಂತ್, ಹೋಬಳಿ ಅಧ್ಯಕ್ಷ ಜಯಣ್ಣ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಸ್ಲಂ, ಆಟೋ ಘಟಕದ ಅಧ್ಯಕ್ಷ ಲಕ್ಷ್ಮಣ್, ಕಾರ್ಯದರ್ಶಿ ಚಂದ್ರಪ್ಪ, ಮುಖಂಡರಾದ ಅಶೋಕ್, ಹೂವಣ್ಣ, ಕುಮಾರ್, ಕಿರಣ್, ಪ್ರದೀಪ್, ನಾಗರಾಜು, ಲೋಹಿತ್ ಸೇರಿದಂತೆ ಪದಾಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net