

ಮಡಿಕೇರಿ: ನಾನು ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದೇನೆ ಹೊರತು ಯಾವುದೇ ರಾಷ್ಟ್ರೀಯ ಪಕ್ಷದ ಏಜೆಂಟ್ ಅಲ್ಲ. ಕಾರ್ಯಕರ್ತರು ಯಾವುದೇ ಗೊಂದಲಗಳಿಗೆ ಒಳಗಾಗಬೇಡಿ ಎಂದು ವಿರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ.ಮನ್ಸೂರ್ ಅಲಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಾನು ಜೆಡಿಎಸ್ ಪಕ್ಷದ ವಿರಾಜಪೇಟೆ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿದ್ದೇನೆ. ಜೆಡಿಎಸ್ ಪಕ್ಷದ ವರಿಷ್ಠರು ವಿರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಬಿ ಫಾರಂ ನೀಡಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿ ಸಂಘಟನೆಗೊಳ್ಳುತ್ತಿದೆ. ಇದನ್ನು ಸಹಿಸಲಾಗದ ರಾಷ್ಟ್ರೀಯ ಪಕ್ಷಗಳು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನನಗೆ ಪಕ್ಷದ ಕಾರ್ಯಕರ್ತರು ಹಾಗೂ ವರಿಷ್ಠರ ಸೂಚನೆಯಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕಣದಿಂದ ಹಿಂದೆ ಸರಿಯುವ ಯಾವುದೇ ಪ್ರಶ್ನೆಯಿಲ್ಲ. ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ಈಗಾಗಲೇ ವಿರಾಜಪೇಟೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ಪಕ್ಷದಿಂದ ಜಾತ್ಯತೀತ ಮತಗಳು ವಿಭಜನೆಗೊಳ್ಳುತ್ತದೆ ಎಂದು ಅಪಪ್ರಚಾರ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಿಗೆ ವಿರಾಜಪೇಟೆ ಕ್ಷೇತ್ರದಲ್ಲಿ ಮತಬ್ಯಾಂಕ್ ಇಲ್ಲವೇ! ಎಂದು ಮನ್ಸೂರ್ ಅಲಿ ಪ್ರಶ್ನಿಸಿದ್ದಾರೆ.
ಅಲ್ಪಸಂಖ್ಯಾತರು ಹಾಗೂ ಇತರೆ ಸಮುದಾಯದ ಎಲ್ಲರೂ ನನ್ನ ಪರವಾಗಿ ಒಲವು ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ. ಕಾರ್ಯಕರ್ತರು ಯಾವುದೇ ಗೊಂದಗಳಿಗೆ ಕಿವಿಕೊಡದೆ ವಿರಾಜಪೇಟೆ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಮನವಿ ಮಾಡಿದ್ದಾರೆ.