

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನೂರಾರು ಶವಗಳನ್ನು ಹೂತು ಹಾಕಿದ್ದಾರೆನ್ನಲಾದ ದೂರಿನ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದೆ. ತಪ್ಪು ಮಾಡಿರುವವರಿಗೆ ಶಿಕ್ಷೆ ಆಗಲಿ. ಆದರೆ, ಈ ಪ್ರಕರಣದಲ್ಲಿ ಧರ್ಮಸ್ಥಳ ದೇವಸ್ಥಾನ ಹಾಗೂ ಧರ್ವಧಿಕಾರಿಯವರಿಗೆ ಕಪ್ಪು ಚುಕ್ಕೆ ಹಚ್ಚುವ ಕೆಲಸ ಯಾರೂ ಮಾಡಬಾರದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ರಾಜಣ್ಣ ಕೊರವಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವೊಂದು ವಿಚಾರಗಳಲ್ಲಿ ಸ್ಥಳೀಯರು (ಧರ್ಮಸ್ಥಳದವರು) ಯಾವಾಗಲೂ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ವಿರೋಧ ಮಾಡಿಕೊಂಡೇ ಬಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಅವಹೇಳನಕಾರಿ ಸಂಗತಿಗಳನ್ನು ಹರಿಯಬಿಡುತ್ತಿದ್ದಾರೆ. ಇದರಿಂದ ಭಕ್ತರಿಗೆ ನೋವಾಗಿದೆ. ಹೀಗೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಹಾಗೂ ಬೀದಿಗಿಳಿದು ಹೋರಾಟ ನಡೆಸುತ್ತೇವೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಪವಿತ್ರವಾದ ಸ್ಥಳ. ಕಳೆದ 57 ವರ್ಷಗಳಿಂದ ಡಾ. ವೀರೇಂದ್ರ ಹೆಗ್ಗಡೆ ಅವರು ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಅವರು ಮೊದಲೇ ದೂರು ನೀಡಿದ್ದರು ಎಂದು ಹೇಳಿದರು.
ಈ ಪ್ರಕರಣದಲ್ಲಿ ದೂರು ನೀಡಿರುವ ಅನಾಮಿಕ ವ್ಯಕ್ತಿ ಸ್ಥಳೀಯ ವಿರೋಧಿಗಳ ಕೈಗೊಂಬೆಯಾಗಿರಬಹುದು. ಆತ ಯಾರು ಎಂಬುದು ಬಹಿರಂಗಗೊಳ್ಳಬೇಕು. ಆತನ ಮುಖ ಮುಚ್ಚಿಟ್ಟು ತನಿಖೆ ನಡೆಸುವ ಅಗತ್ಯವಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ವಸಂತ ಅರ್ಕಸಾಲಿ, ಮಾಜಿ ಅಧ್ಯಕ್ಷ ಸಂತೋಷ ಶೆಟ್ಟಿ, ಬಸವರಾಜ ಹೆಬ್ಬಳ್ಳಿ ಇದ್ದರು.