ಮಾದಕ ವಸ್ತು ಹಿಂದೆ ಬಿದ್ದು ಭವಿಷ್ಯ ಹಾಳುಮಾಡಿಕೊಳ್ಳಬೇಡಿ

madaka vasthu dinacharane
Published on

ಮಡಿಕೇರಿ: ಡ್ರಗ್ಸ್‌ನಂತಹ ಮಾದಕ ವಸ್ತುಗಳ ಸಂಪರ್ಕಕ್ಕೆ ಬಂದವರು ಜೀವನದಲ್ಲಿ ಎಂದಿಗೂ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳಿಗೆ ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ ಕಿವಿಮಾತು ಹೇಳಿದರು.


ಮರಗೋಡಿನ ಭಾರತಿ ವಿದ್ಯಾಸಂಸ್ಥೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಮತ್ತು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜು ಮರಗೋಡು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.


ಯುವ ಜನಾಂಗ ಕ್ಷಣಿಕ ಸುಖದ ಆಸೆಗೆ ಬಿದ್ದು ತಮ್ಮ ಸುಂದರ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು. ಡ್ರಗ್ಸ್‌ನಂತಹ ಮಾದಕ ವಸ್ತುಗಳ ಸಂಪರ್ಕಕ್ಕೆ ಬಂದವರು ಎಂದೂ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ. ಮಾದಕ ವಸ್ತುಗಳ ಬಳಕೆ ಮಾಡಿದವರು ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತದೆ. ಇಂತಹ ದುಶ್ಚಟಗಳ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಡ್ರಗ್ಸ್ ಪೂರೈಕೆ ಮತ್ತು ಬಳಕೆಯ ಕುರಿತು ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ವ್ಯಸನ ಮುಕ್ತ ಸಮಾಜದ ನಿರ್ಮಾಣವಾಬೇಕು ಎಂದು ಕರೆ ನೀಡಿದರು.


ಇದೇ ಸಂದರ್ಭದಲ್ಲಿ ವಿದ್ಯಾಸಾಗರ ಕಲಾವೇದಿಕೆ ಕುಶಾಲನಗರ ಇ.ರಾಜು ಮತ್ತು ಸಂಗಡಿಗರಿಂದ ಜಾಗೃತಿ ಬೀದಿ ನಾಟಕ ಪ್ರದರ್ಶನ ಹಾಗೂ ಗೀತ ಗಾಯನ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಬಿ.ಟಿ.ಮಹೇಶ್ ವಹಿಸಿದ್ದರು. ವೇದಿಕೆಯಲ್ಲಿ ಪೊಲೀಸ್ ಉಪನಿರೀಕ್ಷಕರಾದ ಎಸ್.ಎಸ್.ಶ್ರೀನಿವಾಸ್, ವೆಂಕಟೇಶ್, ಮೂರ್ನಾಡು ಉಪ ಠಾಣಾ ಸಹಾಯಕ ಉಪನಿರೀಕ್ಷಕ ಶ್ರೀನಿವಾಸ್, ಸಿಬ್ಬಂದಿಗಳಾದ ಬಸವರಾಜು, ಮಹೇಶ್, ಮುಖ್ಯಶಿಕ್ಷಕ ಪಿ.ಎಸ್.ರವಿಕೃಷ್ಣ, ಉಪನ್ಯಾಸಕ ಕೆ.ಎಸ್.ಕೃಷ್ಣ ಉಪಸ್ಥಿತರಿದ್ದರು. ಶಿಕ್ಷಕಿ ಬಿ.ಬಿ.ಪೂರ್ಣಿಮಾ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net