

ಧಾರವಾಡ: ಅತಿಯಾದ ಮಳೆಯಿಂದ ಮುಂಗಾರು ಹಂಗಾಮಿನ ಬೆಳೆ ಹಾನಿಯಾಗಿದ್ದು, ರೈತರಿಗೆ ಬೆಳೆ ಪರಿಹಾರ ತಲುಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಬೇಸಿಗೆ ಕಾಲದಲ್ಲಿ ಜಿಲ್ಲೆಯ ಜನರಿಗೆ ನೀರಿನ ಸಮಸ್ಯೆ ಉಂಟಾಗದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮವ ಹಿಸಬೇಕು ಎಂದು ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಅಕ್ಟೋಬರ್ ಅಂತ್ಯದವರೆಗೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿ ಮಳೆಯಾಗಿದೆ ಎಂದು ಭಾವಿಸಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಆಗುವುದಿಲ್ಲವೆಂಬ ಉದಾಸೀನ ತೋರದೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿಗೆ ಪೂರೈಕೆ ಆಗುತ್ತಿರುವ ಆಹಾರ ಸಾಮಗ್ರಿಗಳ ಗುಣಮಟ್ಟ ಸರಿಯಿಲ್ಲ. ಈ ಕುರಿತು ಸಾಕಷ್ಟು ಸೂಚನೆ ನೀಡಿದರೂ ಕೇಳುತ್ತಿಲ್ಲ. ಪಾಲಕರಿಂದ ಪದೇ ಪದೆ ದೂರುಗಳು ಬರುತ್ತಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮೀನುಗಾರಿಕೆ ಇಲಾಖೆಯಿಂದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುತ್ತಿಲ್ಲ. ಸಾಧಕ ಪಲಾನುಭವಿಗಳ ಕುರಿತು ಹೆಚ್ಚಿನ ಪ್ರಚಾರ ನೀಡಿ, ಬೇರೆ ರೈತರು ಮೀನುಗಾರಿಕೆ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದರು.
ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ಇಲಾಖೆಗಳು ಜಿಪಂ ಅನುದಾನ ಸೇರಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಪ್ರತಿ ಯೋಜನೆಯನ್ನು ಗ್ರಾಮೀಣ ಕುಟುಂಬಗಳಿಗೆ, ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ ಇಲಾಖೆಗಳು ಇನ್ನಷ್ಟು ರೈತ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದರು.
ಜಿಪಂ ಕಾರ್ಯನಿವಾಹಕ ಅಧಿಕಾರಿ ಡಾ. ಸುಶೀಲಾ.ಬಿ. ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮವನ್ನು ಪ್ರಸಕ್ತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಕೇಂದ್ರವಾಗಿಟ್ಟುಕೊಂಡು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪಠ್ಯಕ್ರಮ, ಅವರ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಆದ್ಯತೆ ನೀಡಬೇಕು. ಓದುವ ಬೆಳಕು ಕಾರ್ಯಕ್ರಮದಲ್ಲಿ ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ. ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 1,79,053 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಹಿಂಗಾರು ಹಂಗಾಮಿನಲ್ಲಿ 1,40,147 ಹೆಕ್ಟೇರ್ ಪ್ರದೇಶದಲ್ಲಿ ಮುಖ್ಯವಾಗಿ ಕಡಲೆ ಮತ್ತು ಜೋಳದ ಬಿತ್ತನೆ ಆಗಿದೆ. ಮೊರಬ ಹಾಗೂ ಅಳ್ನಾವರದ ರೈತ ಸಂಪರ್ಕ ಕೇಂದ್ರದ ಆವರಣ ಗೋಡೆ ಹಾಗೂ ದಾಸ್ತಾನು ಮಳಿಗೆ ನಿರ್ಮಾಣ ಪ್ರಗತಿಯಲ್ಲಿದೆ ಎಂದರು.
ಜಿಪಂ ಉಪಕಾರ್ಯದರ್ಶಿ ಎಸ್.ಎಂ. ಕುಂದೂರ, ಯೋಜನಾ ನಿರ್ದೇಶಕ ಬಿ.ಎಸ್. ಮುಗನೂರಮಠ, ಇತರರು ಇದ್ದರು. ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸಭೆ ನಿರ್ವಹಿಸಿದರು.
ಇಲಾಖೆ ಅಧಿಕಾರಿಗಳು ಸಭೆಗೆ ಸಂಪೂರ್ಣ ಮಾಹಿತಿಯೊಂದಿಗೆ ಆಗಮಿಸಬೇಕು ಎಂದು ಸಿಇಒ ಡಾ. ಸುಶೀಲಾ.ಬಿ ಸೂಚಿಸಿದರು. ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡುವಾಗ ಉಪಾಧ್ಯಕ್ಷ ಶಿವಾನಂದ ಕರಿಗಾರ ಅವರು ಕಾಲುವೆ ಕಳಪೆ ಕಾಮಗಾರಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ತಡಬಡಿಸಿದರು. ಇದರಿಂದ ಅಧಿಕಾರಿಗಳ ವಿರುದ್ಧ ಕರಿಗಾರ ಅಸಮಾಧಾನ ವ್ಯಕ್ತಪಡಿಸಿದರು. ಆಗ ಮಧ್ಯಪ್ರವೇಶಸಿದ ಸಿಇಒ, ಕೇವಲ ವಾರ್ಷಿಕ ಪ್ರಗತಿಯೊಂದಿಗೆ ಸಭೆಗೆ ಆಗಮಿಸಿದರೆ ಸಾಲದು. ಇಲಾಖೆಯ ಪ್ರತಿ ಕಾಮಗಾರಿಯ ಮಾಹಿತಿ ಇರಬೇಕು. ಕಾಮಗಾರಿಗಳ ಬಗ್ಗೆ ದೂರು ಬಂದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಸಭೆಗೆ ಅಪೂರ್ಣ ಹಾಗೂ ತಪ್ಪು ಮಾಹಿತಿ ಸಲ್ಲಿಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು. ಯೋಜನೆಗಳ ಅನುಷ್ಠಾನ ಅಧಿಕಾರಿಗಳಿಂದಲೇ ವಿಳಂಬವಾಗಬಾರದು ಎಂದು ಸಿಇಒ ಎಚ್ಚರಿಕೆ ನೀಡಿದರು.