

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ ೬೬ನೇ ’ಪರಿನಿರ್ವಾಣ ದಿನ’ ಕಾರ್ಯಕ್ರಮ ಮಂಗಳವಾರ ನಡೆಯಿತು.
ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಧಿಕಾರಿಗಳು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯ ಭಾರತದ ಪ್ರಥಮ ಕಾನೂನು ಮಂತ್ರಿಯಾಗಿ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಭಾರತ ಸಂವಿಧಾನ ರಚಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಗಲಿರುಳು ಶ್ರಮಿಸಿದ್ದಾರೆ. ಭಾರತದ ಎಲ್ಲಾ ವರ್ಗದ ಕಟ್ಟ ಕಡೆಯ ಜನರಿಗೂ ಸಂವಿಧಾನದ ಸೌಲಭ್ಯಗಳು ತಲುಪುವಲ್ಲಿ ಶ್ರಮಿಸಿದ್ದಾರೆ ಎಂದರು.
ಅಂಬೇಡ್ಕರ್ ಅವರ ಸಾರ್ಥಕ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಶೋಷಿತ ಸಮುದಾಯಗಳ ಏಳಿಗೆಗೆ ಇಡೀ ಜೀವನವನ್ನೇ ತ್ಯಾಗ ಮಾಡಿದ್ದಾರೆ ಎಂದು ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಸಮಾನವಾಗಿ ಬದುಕಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಭಿವೃದ್ಧಿ ಸಾಧಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಸುರೇಶ್ ಭಟ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಅಂಬೇಡ್ಕ್‌ರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಚಂದ್ರಶೇಖರ್ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.