

ರಾಯಚೂರು: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಖಿಲ ಭಾರತ ಡಾ.ಬಿ.ಆರ್.ಅಂಬೇಡ್ಕರ್ ಸೈನ್ಯ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವುದು ಇಡೀ ದೇಶವನ್ನೇ ತಲೆತಗ್ಗಿಸುವಂತೆ ಮಾಡಿದೆ. ಇದು ದೇಶದ ಜನರಲ್ಲಿ ಆತಂಕ ಉಂಟು ಮಾಡಿದೆ. ಸಂತ್ರಸ್ತ ಮಹಿಳೆಯರು ಕುಕಿ-ಜೋ ಬುಡಕಟ್ಟಿಗೆ ಸೇರಿದವರಾಗಿದ್ದು, ಇಬ್ಬರ ಮೇಲೆಯೂ ಸಾಮೂಹಿಕ ಅತ್ಯಾಚಾರ ನಡೆದಿದೆ. ಬೆತ್ತಲೆ ಮೆರವಣಿಗೆ ನಡೆಸಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಅಮಾನವೀಯವಾಗಿದೆ ಎಂದು ಹೇಳಿದರು.
ಘಟನೆ ಬಗ್ಗೆ ಕೂಡಲೇ ಸಮಗ್ರ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಮಣಿಪುರದಲ್ಲಿ ಶಾಂತಿ ನೆಲೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು. ಸಂತ್ರಸ್ತರ ಕುಟುಂಬಗಳಿಗೆ ಭದ್ರತೆ ಒದಗಿಸಬೇಕು. ಮುಂದೆ ಇಂಥ ಘಟನೆಗಳು ನಡೆಯದಂತೆ ಭದ್ರತೆ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.